ತುಮಕೂರಿನ ಲಾಡ್ಜ್‌ನಲ್ಲಿ ಪಿಎಸ್‍ಐ ಆತ್ಮಹತ್ಯೆ; 3 ಪುಟಗಳ ಡೆತ್ ನೋಟ್ ಪತ್ತೆ
ಜುಲೈ 1 ರಂದು ತುಮಕೂರು ನಗರದ ದ್ವಾರಕಾ ಹೋಟೆಲ್ ಲಾಡ್ಜ್‌ನ ನಾಲ್ಕನೇ ಮಹಡಿಯಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದ ನಾಗರಾಜು, ಅಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.;
ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆ ಜಿಲ್ಲೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI) ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗರಾಜು (ಮೂಲತಃ ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿ) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.
ಜುಲೈ 1 ರಂದು ತುಮಕೂರು ನಗರದ ದ್ವಾರಕಾ ಹೋಟೆಲ್ ಲಾಡ್ಜ್‌ನ ನಾಲ್ಕನೇ ಮಹಡಿಯಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದ ನಾಗರಾಜು, ಅಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜುಲೈ 6) ಲಾಡ್ಜ್‌ನಿಂದ ದುರ್ವಾಸನೆ ಬಂದಾಗ ಸಿಬ್ಬಂದಿ ಪರಿಶೀಲಿಸಿದ್ದಾರೆ. ಆಗ ಈ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ನಾಗರಾಜು ಅವರು ಸಾವಿಗೂ ಮುನ್ನ ಸುಮಾರು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಡೆತ್ ನೋಟ್‌ನಲ್ಲಿ, ತಮ್ಮ ಕೌಟುಂಬಿಕ ಜೀವನದ ಕುರಿತು ಸುದೀರ್ಘವಾಗಿ ಉಲ್ಲೇಖಿಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, "ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ" ಎಂದು ಬರೆದಿದ್ದಾರೆ ಎನ್ನಲಾಗಿದೆ. ಹೋಟೆಲ್ ಮಾಲೀಕರಿಗೂ ಡೆತ್ ನೋಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ.
ಪತ್ರದಲ್ಲಿ, "ನನ್ನ ಅಳಿಯ ಮಗನಂತೆ, ನನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ" ಎಂದೂ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಪಿಎಸ್‌ಐ ನಾಗರಾಜು ಅವರು ಇನ್ನು ಕೇವಲ ಒಂದೂವರೆ ವರ್ಷದಲ್ಲಿ ಸೇವೆಯಿಂದ ನಿವೃತ್ತರಾಗಬೇಕಿತ್ತು. ಸದ್ಯ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.