ಆಪರೇಷನ್ ಕಮಲ | ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಮಿಷ; ವಿಜಯೇಂದ್ರ ಕಿಡಿ, ಡಿಸಿಎಂ, ಸಚಿವರ ಸಮರ್ಥನೆ
ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡುವವರು ಯಾರು ಎಂಬುದನನ್ನು ಪತ್ತೆ ಮಾಡಲು ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ.;
ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚನಾವಣೆ ನಡೆಯುತ್ತಿರುವ ವೇಳೆಯಲ್ಲೇ ಕಾಂಗ್ರೆಸ್ ಸರ್ಕಾರವನ್ನು ಬುಡಮೇಲು ಮಾಡಲು ಬಿಜೆಪಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ ಹಾಗೂ 50 ಮಂದಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿರುವುದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ, ಇಂತಹ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡುವವರು ಯಾರು ಎಂಬುದನನ್ನು ಪತ್ತೆ ಮಾಡಲು ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.
"ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ 50 ಕೋಟಿ ರೂ.ಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ.. ನಿಮ್ಮ ಈ ಹೇಳಿಕೆ, ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರಿದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ," ಎಂದು ವ್ಯಂಗ್ಯವಾಡಿದ್ದಾರೆ.
ಈ ನಡುವೆ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. 50 ಮಂದಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ ಎಂದು ಡಿ.ಕೆ. ಶಿವಕುಮಾರ್ ಅವರೂ ಸಮರ್ಥಿಸಿದ್ದಾರೆ. "ಬಿಜೆಪಿ ಆಮಿಷ ಒಡ್ಡಿರುವುದು ನಿಜ. ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ," ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿ.ನರಸೀಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, " ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ," ಎಂದು ಹೇಳಿಕೆ ನೀಡಿದ್ದರು.
ಇನ್ನೊಂದೆಡೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೂ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ನೀಡಲು ಮುಂದಾಗಿರುವುದು ನಿಜ. ಕಳೆದ 18 ತಿಂಗಳಿಂದ ಬಿಜೆಪಿ ಈ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ.
ವಿಜಯೇಂದ್ರ ಹೇಳಿಕೆಗೆ ಉತ್ತರ ನೀಡುವುದಿಲ್ಲ: ಸಿಎಂ
ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಗುರುವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ, "ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ," ಎಂದು ಹೇಳಿದ್ದಾರೆ.