ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ; ಹೆಚ್ಚಿದ ಕುತೂಹಲ

ಮಾಸ್ಕ್​ ಮ್ಯಾನ್​ ವಕೀಲರ ಮೂಲಕ ನೀಡಿದ್ದ ದೂರಿನ ಆಧಾರದ ಮೇಲೆ, ಪ್ರಕರಣದ ಸಮಗ್ರ ತನಿಖೆಗಾಗಿ ಜುಲೈ ತಿಂಗಳಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚಿಸಿತ್ತು.

Update: 2025-10-28 04:54 GMT

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ಅಸಹಜ ಸಾವುಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್ಐಟಿ) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಲು ಅಂತಿಮ ಸಿದ್ಧತೆ ನಡೆಸಿದೆ. ಇನ್ನೆರಡು ದಿನಗಳಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೃತದೇಹಗಳನ್ನು ವಿಲೇವಾರಿ ಮಾಡಿರುವುದಾಗಿ ವ್ಯಕ್ತಿಯೊಬ್ಬರು ವಕೀಲರ ಮೂಲಕ ನೀಡಿದ್ದ ದೂರಿನ ಆಧಾರದ ಮೇಲೆ, ಪ್ರಕರಣದ ಸಮಗ್ರ ತನಿಖೆಗಾಗಿ ಜುಲೈ ತಿಂಗಳಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚಿಸಿತ್ತು. ಕಳೆದ ಕೆಲವು ತಿಂಗಳುಗಳಿಂದ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದ ತಂಡ, ಇದೀಗ ಅಂತಿಮ ಹಂತಕ್ಕೆ ತಲುಪಿದೆ.

ತನಿಖಾ ತಂಡವು ಹಲವು ಸಾಕ್ಷಿಗಳ ವಿಚಾರಣೆ ನಡೆಸಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಗಳು ಸೇರಿದಂತೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಕ್ರೋಢೀಕರಿಸಿದೆ. ಕೆಲವು ದೂರುದಾರರು ತಮ್ಮ ಹೇಳಿಕೆಗಳನ್ನು ಹಿಂಪಡೆದ ಹಿನ್ನೆಲೆಯಲ್ಲಿ, ಪ್ರಕರಣದ ಹಿಂದೆ 'ಷಡ್ಯಂತ್ರ'ದ ಸಾಧ್ಯತೆಗಳ ಬಗ್ಗೆಯೂ ತಂಡವು ತನಿಖೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲ ಅಂಶಗಳನ್ನು ಒಳಗೊಂಡ ಸಮಗ್ರ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ

ತನಿಖೆ ಬಹುತೇಕ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ ಏನಿರಲಿದೆ ಎಂಬುದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಎಸ್‌ಐಟಿಗೆ ಸೂಚನೆ ನೀಡಿರುವುದು, ವರದಿಯ ಸಲ್ಲಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿದೆ 

Tags:    

Similar News