Accident |ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಅಪಘಾತ; ಮಗು ಸೇರಿ ಐವರ ಸಾವು
ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಹೊಳಲ್ಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ಟರ್-ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.;
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
ಚಿತ್ರದುರ್ಗದ ಹೊಳಲ್ಕೆರೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಾಪುರಂ ನಿವಾಸಿಗಳು ಎಂದು ತಿಳಿದುಬಂದಿದೆ.
ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಹೊಳಲ್ಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಶಿವನಾಗಲಿ (55), ಸುನೀತಾ (34) ಹಾಗೂ ಶ್ಯಾಂಬಾಬು (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟ್ರ್ಯಾಕ್ಟರ್‌ಗೆ ಓಮ್ನಿ ಡಿಕ್ಕಿ, ಇಬ್ಬರು ಮೃತ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿ ಟ್ರ್ಯಾಕ್ಟರ್‌ಗೆ ಓಮ್ನಿ ಕಾರು ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಲಕ್ಷ್ಮೀ ಹಾಗೂ ದಾಕ್ಷಾಯಿಣಿ (50) ಮೃತಪಟ್ಟಿದ್ದಾರೆ. ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.