Budget Session | ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಪ್ರತಿಪಕ್ಷ ಶಾಸಕರಿಗೆ ಸಿಎಂ ಭರವಸೆ
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದೂ ಸಿಎಂ ಉಲ್ಲೇಖಿಸಿದರು.
ತಾಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.
ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷರು ಪ್ರತಿಪಕ್ಷ ಶಾಸಕರನ್ನು ಕಡೆಗಣಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಗ್ಯಾರಂಟಿ ಸಮಿತಿ ಅಧ್ಯಕ್ಷರಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಸರ್ಕಾರದ ಎಲ್ಲಾ ಯೋಜನೆ- ಕಾರ್ಯಕ್ರಮಗಳಲ್ಲಿ ಅವರ ಮಾತೇ ಅಂತಿಮ ಎಂದು ತಾಲೂಕು ಆಡಳಿತಗಳಿಗೆ ಪತ್ರ ಬರೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಸ್ಪಷ್ಟನೆ ನೀಡಿದರು.