ಸ್ವಪಕ್ಷಿಯರಿಂದಲೇ ಭ್ರಷ್ಟಾಚಾರ ಆರೋಪ, ಸಚಿವ ಜಮೀರ್‌ ರಾಜೀನಾಮೆಗೆ ಆರ್‌. ಅಶೋಕ್‌ ಆಗ್ರಹ

ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ. ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ.;

Update: 2025-06-20 07:06 GMT

ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌

ವಸತಿ ಸಚಿವ ಜಮೀರ್​ ಅಹ್ಮದ್ ವಿರುದ್ಧ ಸ್ವಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಅವರು ಅಧಿಕಾರದಲ್ಲಿ ಮುಂದುವರಿಬಾರದು. ಸಿಎಂ ಸಿದ್ದರಾಮಯ್ಯ ಈ ಕೂಡಲೇ  ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

ಅವರು ತಮ್ಮ 'ಎಕ್ಸ್' (ಹಿಂದೆ ಟ್ವಿಟರ್) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರು ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಬಿ.ಆರ್. ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ, ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಇತ್ತೀಚೆಗೆ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ "ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ" ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪುಷ್ಟಿ ನೀಡುವಂತೆ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದು, ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಲಂಚಗುಳಿತನದ ಬಗ್ಗೆ ಬಿ. ಆರ್​ ಪಾಟೀಲ್​, ತಮಗಿರುವ ಮಾಹಿತಿಯನ್ನು ಬಹಿರಂಗಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆರ್. ಅಶೋಕ್ ಹೇಳಿದ್ದಾರೆ. ಈ ವಿಷಯದಲ್ಲಿ ರಾಜ್ಯ ಬಿಜೆಪಿ ಅವರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದೂ ಅವರು ಭರವಸೆ ನೀಡಿದ್ದಾರೆ. 

Tags:    

Similar News