ಸ್ವಾತಂತ್ರ್ಯೋತ್ಸವ ಭಾಷಣ: ಒಕ್ಕೂಟ ವ್ಯವಸ್ಥೆ ಆಶಯದಿಂದ ಕೇಂದ್ರ ಸರ್ಕಾರ ದೂರ; ಸಿದ್ದರಾಮಯ್ಯ ವಾಗ್ದಾಳಿ
"ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂನಿರೀಕ್ಷಿಸುತ್ತಾರೆ," ಎಂದರು ಸಿಎಂ.;
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಜನಕಲ್ಯಾಣ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಠ್ರಧ್ವಜಾರೋಹಣ ನಡೆಸಿದ ಬಳಿಕ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯ ಆಶಯದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
"ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ, ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸಲಾಗುತ್ತಿದೆ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿರುವುದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕು," ಎಂದು ಕೇಂದ್ರವನ್ನು ಒತ್ತಾಯಿಸಿದರು.
"ಅಂತೆಯೇ ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾಡಿನ ಮಹಾ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂನಿರೀಕ್ಷಿಸುತ್ತಾರೆ," ಎಂದು ಬಿಜೆಪಿಗೆ ಪರೋಕ್ಣ ವಾಗ್ದಾಳಿ ನಡೆಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿರುವ ಮತದಾರರು, ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ದೇಶದ ಚಲನಶೀಲ, ಸ್ಪಂದನಾಶೀಲ ಪ್ರಜಾಪ್ರಭುತ್ವಕ್ಕೆ ನಮ್ಮ ಸಂವಿಧಾನವೇ ಶ್ರೀರಕ್ಷೆಯಾಗಿದೆ. ದೇಶದಲ್ಲಿ ನಮ್ಮ ಪ್ರಜಾಪ್ರಭುತ್ವವು ಕ್ರಿಯಾಶೀಲವಾಗಲು, ಜನ ಜೀವನದ ಸಹಜ ಮತ್ತು ಅವಿಭಾಜ್ಯ ಭಾಗವಾಗಿರಲು ಎದುರಾಗಬಹುದಾದ ಅಡ್ಡಿ-ಆತಂಕಗಳ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ಅವರು ಅಂದೇ ಮುನ್ನೆಚ್ಚರಿಕೆ ನೀಡಿದ್ದರು. ಮೊದಲನೆಯದಾಗಿ, ಜಾತಿ-ಮತದ ಆಧಾರದ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು. ಎರಡನೆಯದಾಗಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಆಶಯಗಳನ್ನು ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ಮುಲಾಜಿಲ್ಲದೆ ದೂರ ಇಡಬೇಕು. ಅಂತಿಮವಾಗಿ ಸಾಮಾಜಿಕ ಪ್ರಜಾಪ್ರಭುತ್ವ ಇಲ್ಲದ ರಾಜಕೀಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದರು ಎಂದರು.
ಕರ್ನಾಟಕ ಮಾದರಿ
ಅನ್ನ, ನೀರು ಮತ್ತು ಪ್ರಾಣಕ್ಕಿಂತ ಸ್ವಾತಂತ್ರ್ಯ ಎನ್ನುವುದು ಬಹಳ ದೊಡ್ಡದು ಎಂದು ಹೋರಾಡಿದ ಎಲ್ಲಾ ಮಹನೀಯರು ಕಂಡ ಕನಸಿನ ಹಾದಿಯಲ್ಲಿ ದೇಶವನ್ನು ಮುನ್ನಡೆಸುವುದಕ್ಕಾಗಿ ಮತ್ತು ಅಭಿವೃದ್ಧಿ ಸಾಧಿಸುವುದಕ್ಕಾಗಿ ಕಳೆದ 77 ವರ್ಷಗಳಲ್ಲಿ ಕರ್ನಾಟಕ ರಾಜ್ಯವು ಅತ್ಯಂತ ಮಹತ್ತರವಾದ ಕೊಡುಗೆಗಳನ್ನು ನೀಡಿದೆ. ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಭ್ರಾತೃತ್ವದ ಆಧಾರದಲ್ಲಿ ದೇಶವನ್ನು ಕಟ್ಟುವ ಸ್ವಾತಂತ್ರ್ಯ ಚಳವಳಿಗಾರರ ಆಶಯವನ್ನು ನಮ್ಮ ಸಂವಿಧಾನ ಪ್ರತಿಪಾದಿಸಿದೆ. ಕರ್ನಾಟಕದ ಬಸವಾದಿ ಶರಣರು ಪ್ರತಿಪಾದಿಸಿದ ಕಾಯಕ, ದಾಸೋಹ ಮತ್ತು ಸಮ-ಸಮಾಜ ನಿರ್ಮಾಣದ ತತ್ವಗಳು ಸಂವಿಧಾನದ ಮೂಲಭೂತ ಆಶಯಗಳಿಗೆ ಸಮೀಪವಾಗಿವೆ ಎಂದು ಹೇಳಿದರು.
ಈ ಮೌಲ್ಯಗಳನ್ನು ಆಧಾರವಾಗಿರಿಸಿಕೊಂಡು ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ ಕಾರ್ಯವನ್ನು ಕರ್ನಾಟಕದಲ್ಲಿ ನಾವು ಮಾಡುತ್ತಿದ್ದೇವೆ. ಇದು ಅಭಿವೃದ್ಧಿಯ ಕರ್ನಾಟಕ ಮಾದರಿ.
2023 ರಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರ ಕಳೆದ ಹದಿನೈದು ತಿಂಗಳುಗಳ ಅವಧಿಯಲ್ಲಿ ಈ ನಿಟ್ಟಿನಲ್ಲಿ ಸ್ಪಷ್ಟ ಹೆಜ್ಜೆಗಳನ್ನು ಇರಿಸಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜೊತೆಜೊತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ'ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆ,"ಎಂದರು.
" ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದಾಗಿ ಮಾಸಿಕ ಸರಾಸರಿ 4,000-5,000 ರೂ.ಗಳಷ್ಟು ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಇದು ಹಲವು ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ನೀಡುವ Universal Basic Income ಪರಿಕಲ್ಪನೆ. ಮುಂದುವರಿದ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಅಶಕ್ತ ವರ್ಗಗಳಿಗೆ ನೆರವಾಗಲು ಜಾರಿಗೊಳಿಸಲಾಗುತ್ತಿರುವ ಇಂತಹ ಯೋಜನೆಯೊಂದನ್ನು ಅತೀ ದೊಡ್ಡ ಮಟ್ಟದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ. ಈ ಬಗ್ಗೆ ನಮಗೆ ಹೆಮ್ಮೆ ಇದೆ" ಎಂದ ಅವರು, "ಈ ಯೋಜನೆಗಳು ಮುಂದುವರಿಯಲಿವೆ. ಮಾತ್ರವಲ್ಲ,ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಲಿದ್ದೇವೆ," ಎಂದರು.