ಸಂತ್ರಸ್ತೆ ಅಪಹರಣ ಪ್ರಕರಣ | ಹೆಚ್.ಡಿ ರೇವಣ್ಣ ಜಾಮೀನು ಮಂಜೂರು ದೋಷಪೂರಿತ: ಹೈಕೋರ್ಟ್
ಮಾಜಿ ಸಚಿವ ಹೆಚ್.ಡಿ ರೇವಣ್ಣ ಪಡೆದಿದ್ದ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.;
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ದೋಷಪೂರಿತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಕರಣದಲ್ಲಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿರುವ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿರುವ ವಿಶೇಷ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಮೌಕಿಕವಾಗಿ ತಿಳಿಸಿದ್ದು, ಪ್ರಕರಣದ ಪ್ರತಿವಾದಿ ಹೆಚ್ ಡಿ ರೇವಣ್ಣಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ನೋಟಿಸ್ ತಲುಪಿದ ತಕ್ಷಣ ವಿಚಾರಣೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
ಎಸ್‌ಐಟಿ ಪರ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದು, "ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 364(ಎ) ಅನ್ವಯವಾಗುವುದಿಲ್ಲ ಎಂದು ವಿಚಾರಣಾ ನ್ಯಾಯಾಲಯ ಅಭಿಪ್ರಾಯಪಟ್ಟು ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣದಲ್ಲಿ ಸೆಕ್ಷನ್ 364 (ಎ) ಅನ್ವಯವಾಗುತ್ತದೆ. ಆದ್ದರಿಂದ ಜಾಮೀನು ರದ್ದುಪಡಿಸಬೇಕು. ಅಲ್ಲದೆ, ದೂರು ನೀಡದಂತೆ ಸಂತ್ರಸ್ತೆಗೆ ನಿರ್ಬಂಧ ಹೇರಲಾಗಿದೆ" ಎಂದು ಹೇಳಿದರು. ವಾದ ಆಲಿಸಿದ ಪೀಠ ಆಕ್ಷೇಪಣೆ ಸಲ್ಲಿಸುವಂತೆ ರೇವಣ್ಣಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದ ಹಿನ್ನೆಲೆ
ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್.ಡಿ.ರೇವಣ್ಣ ಹಾಗೂ ಇತರರ ವಿರುದ್ಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಚ್.ಡಿ.ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಏಪ್ರಿಲ್ 29 ರಂದು ಬಂಧನಕ್ಕೊಳಗಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೆಚ್.ಡಿ ರೇವಣ್ಣ ಪಡೆದಿದ್ದ ಜಾಮೀನನ್ನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಅರ್ಜಿ ಸಲ್ಲಿಸಿತ್ತು.
ಈ ಮಧ್ಯೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಮೇ 31ರ ನಸುಕಿನ 12.50ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಎಸ್ಐಟಿ ತಂಡ ಕೂಡಲೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.