ಮೈಸೂರು ಗಲಭೆ | ಅವಹೇಳನಕಾರಿ ಪೋಸ್ಟ್: ಪ್ರತಿಭಟನೆ, ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ

ಕಲ್ಲು ತೂರಾಟದಿಂದಾಗಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿದ್ದು,10 ಕ್ಕೂ ಹೆಚ್ಚು ಪೊಲೀಸ್ ವಾಹನಗಳ ಜಖಂ ಆಗಿವೆ.;

Update: 2025-02-11 06:02 GMT
ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಮುಸ್ಲಿಂ ಸಮುದಾಯದ ಬಗ್ಗೆ ವ್ಯಕ್ತಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ ಎಂಬ ಕಾರಣಕ್ಕಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಕಲ್ಲು ತೂರಾಟದಿಂದಾಗಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿದ್ದು,10 ಕ್ಕೂ ಹೆಚ್ಚು ಪೊಲೀಸ್ ವಾಹನಗಳ ಜಖಂ ಆಗಿವೆ. 

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಅರವಿಂದ ಕೇಜ್ರಿವಾಲ್‌ ಅವರ ಭಾವಚಿತ್ರವನ್ನು ಹಾಕಿ ಅದರ ಮೇಲೆ ಪ್ರವಾದಿ ಮುಹಮ್ಮದ್ ಪೈಗಂಬ‌ರ್ ಅವರ ಕುರಿತ ಸಾಲುಗಳನ್ನು ಉಲ್ಲೇಖ ಮಾಡಿದ್ದ. ಇದರ ಜೊತೆಗೆ ಮಹಾತ್ಮಾಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರ ಕುರಿತ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ್ದ ಎಂದು ಆರೋಪಿಸಲಾಗಿದೆ. 

ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆಯೇ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ಆತನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು. ಇದಲ್ಲದೆ ಶಾಂತಿನಗರ, ಮಹದೇವಪುರ ರಸ್ತೆ ಬಂದ್‌ ಮಾಡಿದರು. ಮಧ್ಯರಾತ್ರಿಯಾದರೂ ಸನ್ನಿವೇಶ ನಿಯಂತ್ರಣಕ್ಕೆ ಬಂದಿರಲಿಲ್ಲ. ಈ ನಡುವೆ ಕೆಲವರು ಕಲ್ಲು ತೂರಾಟ ನಡೆಸಿದಾಗ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಸಿಡಿಸಿದರು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಗಲಾಟೆ ತೀವ್ರಗೊಂಡ ಹಿನ್ನೆಲೆ ಶಾಂತಿ ನೆಲೆಸಲಿ ಎನ್ನುವ ಕಾರಣಕ್ಕೆ ಮೈಸೂರು ಕಮೀಷನರ್ ಅಧಿಕೃತ ಎಕ್ಸ್ ಖಾತೆಯಲ್ಲಿ ಆರೋಪಿಯ ಫೋಟೋ ಹಾಗೂ ಎಫ್‌ಐಆರ್ ಕಾಪಿಯನ್ನು ಹಂಚಿಕೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಕ್ಕೆ ಹೆಚ್ಚಿನ ಪೊಲೀಸರು ಆಗಮಿಸಿದ್ದು, ಉದಯಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಬಿಗಿ ಬಂದೋಬಸ್ತ್ ಮಾಡಿದ್ದಾರೆ.

Tags:    

Similar News