ನವದೆಹಲಿ, ಮಾ, 6- ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್‌ನ ಉನ್ನತ ನಾಯಕತ್ವವು ಗುರುವಾರ ಸಭೆ ಸೇರಲಿದೆ.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ನಿರ್ಧರಿಸುವ ಕೇಂದ್ರ ಚುನಾವಣಾ ಸಮಿತಿ (ಸಿಇಸಿ)ಯ ಮೊದಲ ಸಭೆ ಮಾರ್ಚ್ 7 ರಂದು ಸಂಜೆ 6 ಗಂಟೆಗೆ ನಡೆಯ ಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಭೆಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಸಮಿತಿಯ ಭಾಗವಾಗಿರುವ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಕಳೆದ ವಾರ ಬಿಜೆಪಿ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.
ಕರ್ನಾಟಕದ ಪಟ್ಟಿ: ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಾವು ಹಾಗೂ ಮುಖ್ಯಮಂತ್ರಿ ಮಾರ್ಚ್ 7 ರಂದು ದಿಲ್ಲಿಗೆ ತೆರಳಲಿದ್ದು, ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇವೆ. ಸಭೆಯಲ್ಲಿ ರಾಜ್ಯದ ಮೊದಲ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಈಸಂಬಂಧ ಮಾತುಕತೆ ನಡೆಸಿದ್ದೇವೆ. ಮಾರ್ಚ್ 7ರಂದು ಅಭ್ಯರ್ಥಿಗಳ ಪಟ್ಟಿಯನ್ನು ಹೊಸದೆಹಲಿಯಲ್ಲಿ ಅಂತಿಮಗೊಳಿಸುವುದಾಗಿ ಶಿವಕುಮಾರ್ ಅವರು ಹೇಳಿದ್ದಾರೆ. ಮೂಲಗಳ ಪ್ರಕಾರ, 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ.