Helicopter Crash: ಕೇದಾರನಾಥ ಬಳಿ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 7 ಮಂದಿ ದುರ್ಮರಣ
ಮೃತಪಟ್ಟವರಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ಪ್ರಯಾಣಿಕರು ಸೇರಿದ್ದಾರೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ.;
ಉತ್ತರಾಖಂಡದ ಪವಿತ್ರ ಕೇದಾರನಾಥ ದೇವಾಲಯದ ಸಮೀಪ ಇಂದು (ಶುಕ್ರವಾರ) ಬೆಳಿಗ್ಗೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಪ್ರತಿಕೂಲ ಹವಾಮಾನವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಮಾಹಿತಿ ನೀಡಿದಂತೆ, ಗೌರಿಕುಂಡ ಬಳಿಯ ಅರಣ್ಯ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 5:30ರ ಸುಮಾರಿಗೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿದ್ದ ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ಗೆ ಸೇರಿದ ಹೆಲಿಕಾಪ್ಟರ್, ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಕೇದಾರಘಾಟಿಯ ಗೌರಿಕುಂಡ ಮತ್ತು ತ್ರಿಜುಗಿನಾರಾಯಣ್ ನಡುವಿನ ಅರಣ್ಯದಲ್ಲಿ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ.
ಮೃತಪಟ್ಟವರಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ಪ್ರಯಾಣಿಕರು ಸೇರಿದ್ದಾರೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ, ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡಗಳನ್ನು ತಕ್ಷಣವೇ ಘಟನಾ ಸ್ಥಳಕ್ಕೆ ರವಾನಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮುಖ್ಯಮಂತ್ರಿ ಧಾಮಿ ಸಂತಾಪ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಕ್ಸ್ (ಹಿಂದಿನ ಟ್ವಿಟರ್) ಮೂಲಕ ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. "ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಇತರ ಸಂಸ್ಥೆಗಳು ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇತ್ತೀಚಿನ ಸರಣಿ ಅಪಘಾತಗಳು ಕಳವಳಕ್ಕೆ ಕಾರಣ
ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡದಲ್ಲಿ ಸರಣಿ ವೈಮಾನಿಕ ಅಪಘಾತಗಳು ವರದಿಯಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಅಹಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 241 ವಿಮಾನಯಾತ್ರಿಕರು ಸೇರಿದಂತೆ ಒಟ್ಟು 271 ಮಂದಿ ಮೃತಪಟ್ಟಿದ್ದರು. ಈ ಭಾರಿ ದುರಂತದ ನಂತರ ಮತ್ತೊಂದು ವಾಯುಯಾನ ಅವಘಡ ಸಂಭವಿಸಿದೆ.
ಮೇ 8ರಂದು, ಗಂಗೋತ್ರಿ ಧಾಮಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಆರು ಜನರು ಪ್ರಾಣ ಕಳೆದುಕೊಂಡಿದ್ದರು. ಜೂನ್ 7ರಂದು, ಕೇದಾರನಾಥಕ್ಕೆ ಹೊರಟಿದ್ದ ಮತ್ತೊಂದು ಹೆಲಿಕಾಪ್ಟರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷದಿಂದಾಗಿ ರಸ್ತೆಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಈ ಘಟನೆಯಲ್ಲಿ ಪೈಲಟ್ ಗಾಯಗೊಂಡಿದ್ದರೂ, ಐವರು ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಈ ಸರಣಿ ಘಟನೆಗಳು ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿನ ವಾಯುಯಾನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಘಟನೆಗಳ ಪುನರಾವರ್ತನೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಜ್ಞರು ಮತ್ತು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.