ಲೋಕಸಭೆ ಚುನಾವಣೆ | ಬಿಜೆಪಿ- ಜೆಡಿಎಸ್ ಮೈತ್ರಿ ಗೊಂದಲ: ಸುಖಾಂತ್ಯವಾಗಲಿದೆ ಎಂದ ಬಿ.ವೈ ವಿಜಯೇಂದ್ರ
ಜೆಡಿಎಸ್‌ಗೆ ಮೂರು ಲೋಕಸಭಾ ಕ್ಷೇತ್ರ ಬಿಟ್ಟು ಕೊಡುವ ವಿಚಾರದಲ್ಲಿ ಗೊಂದಲ;
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಕರ್ನಾಟಕ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿವಿಧ ಪಕ್ಷಗಳ ಮೈತ್ರಿ ಬಹುತೇಕ ಅಂತಿಮವಾಗಿದೆ. ಆದರೆ, ಪ್ರಾರಂಭದ ಹಂತದಲ್ಲೇ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಅಪಸ್ವರ ಶುರುವಾಗಿದೆ.
ಬಿಜೆಪಿ- ಜೆಡಿಎಸ್ ಮೈತ್ರಿ ಅಪಸ್ವರದ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಜೆಡಿಎಸ್ ಸಮಾಧಾನವಾಗುವ ರೀತಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಮೈತ್ರಿಯಲ್ಲಿ ಈ ರೀತಿಯ ಬೆಳವಣಿಗೆ ಸಾಮಾನ್ಯ. ಬಿಜೆಪಿ ಹಾಗೂ ಜೆಡಿಎಸ್ ವರಿಷ್ಠರು ಮಾತನಾಡುತ್ತಿದ್ದು, ಇದು ಸುಖಾಂತ್ಯ ಕಾಣಲಿದೆ. ಇನ್ನು ದೂರವಾಣಿಯ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಈ ವಿಚಾರವಾಗಿ ಮಾತನಾಡಿದ್ದೇನೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೂ ಮಾತನಾಡಿದ್ದೇನೆ ಎಂದರು.
ಕಾಂಗ್ರೆಸ್‌ನವರಿಗೆ ಬಿಜೆಪಿ ನಾಯಕರ ಮೇಲೆ ವಿಶ್ವಾಸ ಹೆಚ್ಚಾಗಿದೆ. ಸದಾನಂದ ಗೌಡ ಅವರು ಕಾಂಗ್ರೆಸ್‌ಗೆ ಹೋಗುವುದಿಲ್ಲ, ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎನ್ನುವ ವಿಶ್ವಾಸ ಇದೆ. ಬಿಜೆಪಿ ಮುಖಂಡರಾದ ಈಶ್ವರಪ್ಪ ಅವರನ್ನು ಕಡೆಗಣಿಸುವುದಿಲ್ಲ. ಅವರಿಗೆ ಸತ್ಯ ತಿಳಿದು ಎಲ್ಲ ಸರಿ ಹೋಗಲಿದೆ. ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರದ ಬಗ್ಗೆ ಹೈಕಮ್ಯಾಂಡ್ ನಿರ್ಧರಿಸಲಿದೆ ಎಂದರು.
ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುತ್ತೀರಾ ಎನ್ನುವ ಪ್ರಶ್ನೆಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದಷ್ಟೇ ಹೇಳಿದ್ದಾರೆ.
ಬಿಜೆಪಿ ತನ್ನ ಮಿತ್ರ ಪಕ್ಷ ಜೆಡಿಎಸ್‌ಗೆ ಎರಡು ಕ್ಷೇತ್ರಗಳನ್ನಷ್ಟೇ ಬಿಟ್ಟು ಕೊಡಲಿದೆ ಎನ್ನುವ ಮಾತುಗಳು ಕೇಳಿ ಬಂದಿರುವುದು ಜೆಡಿಎಸ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಅಸಮಾಧಾನವನ್ನು ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಹೊರ ಹಾಕಿದ್ದಾರೆ. ಇನ್ನು ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಾಗಿನಿಂದಲೂ ಜೆಡಿಎಸ್‌ನ ಪ್ರಮುಖ ನಾಯಕರು ಮೈತ್ರಿಯನ್ನು ವಿರೋಧಿಸುತ್ತಲ್ಲೇ ಇದ್ದಾರೆ. ಇದೀಗ ಜೆಡಿಎಸ್‌ಗೆ ಬಿಜೆಪಿ ಪ್ರಮುಖ್ಯತೆ ನೀಡುತ್ತಿಲ್ಲ ಎಂದು ಎಚ್. ಡಿ ಕುಮಾರಸ್ವಾಮಿ ಅವರು ಅಸಮಾಧಾನ ಹೊರಹಾಕಿದ್ದಾರೆ.
ಮುನಿಸಿಗೆ ಕಾರಣವೇನು ?
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಇದೀಗ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿದೆ. ಬಿಜೆಪಿ ಕೇವಲ ಎರಡು ಸೀಟುಗಳನ್ನು ಮಾತ್ರ ಬಿಟ್ಟುಕೊಟ್ಟಿದೆ. ಎರಡು ಸೀಟಿಗಾಗಿ ಇಷ್ಟು ಪ್ರಯತ್ನ ಮಾಡಬೇಕಿತ್ತೇ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಹಾಸನ, ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಒಪ್ಪಿದೆ. ಆದರೆ, ಕೋಲಾರ ಲೋಕಸಭಾ ಕ್ಷೇತ್ರವನ್ನು ಬಿಟ್ಟು ಕೊಡಲು ಒಪ್ಪಿಗೆ ಸೂಚಿಸುತ್ತಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು, ಬಿಜೆಪಿಗೆ ಜೆಡಿಎಸ್‌ನ ಬಲಾಬಲದ ಬಗ್ಗೆ ಮಾಹಿತಿ ಇದೆ. ಬಿಜೆಪಿಯು ಜೆಡಿಎಸ್‌ಗೆ ಮೂರರಿಂದ ನಾಲ್ಕು ಸ್ಥಾನಗಳನ್ನು ನೀಡಲಿದೆ ಎನ್ನುವ ವಿಶ್ವಾಸವಿದೆ. ಎರಡು ಸೀಟಿಗಾಗಿ ಇಷ್ಟೆಲ್ಲಾ ಪ್ರಯತ್ನ ಮಾಡಬೇಕಾ, ಇಷ್ಟೆಲ್ಲಾ ಹೊಂದಾಣಿಕೆ ಮಾಡಿಕೊಳ್ಳಬೇಕಾ ? ಈಗಲೂ ನಮ್ಮ ಅಭ್ಯರ್ಥಿಗಳು ಹಾಸನ ಹಾಗೂ ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದರೆ, ನಮ್ಮ ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದಿದ್ದಾರೆ.