ಬೆಂಗಳೂರಿನ ಶಾಲೆಯೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಆತಂಕ ಸೃಷ್ಟಿ

Update: 2024-03-19 05:24 GMT

ಬೆಂಗಳೂರಿನಲ್ಲಿ ಮತ್ತೆ ಬಾಂಬ್‌ ಬೆದರಿಕೆಯಂತಹ ಆತಂಕ ಸೃಷ್ಟಿಯಾಗಿದೆ. ನಗರದ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಕಾಣಿಸಿವೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಶಾಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.

ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿವೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.

ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಈ ಸಂದರ್ಭದಲ್ಲಿ ಐವರು ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಿದ್ದಾರೆ, ಆದರೆ ಈವರೆಗೂ ಬಾಮಬ್‌ ಇಟ್ಟು ಹೋಗಿರುವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.

Tags:    

Similar News