ಇವಿಎಂ ವಿರುದ್ಧ ಸುಳ್ಳು ಸುದ್ದಿ: ಆನ್‌ಲೈನ್ ಚಾನೆಲ್ ಮೇಲೆ ಪ್ರಕರಣ
ತಿರುವನಂತಪುರಂ, ಏಪ್ರಿಲ್ 20- ವಿದ್ಯುನ್ಮಾನ ಮತಯಂತ್ರಗಳು ಮತ್ತು ಚುನಾವಣಾಧಿಕಾರಿಗಳ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆನ್‌ಲೈನ್ ಚಾನೆಲ್ ವಿರುದ್ಧ ಕೇರಳ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ.
ಸಿಟಿ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿಲ್ಲೆಯಲ್ಲಿ ಇರಿಸಿದ ವಿದ್ಯುನ್ಮಾನ ಮತಯಂತ್ರಗಳಲ್ಲಿ ದೋಷ ಕಾಣಿಸಿಕೊಂಡಿದೆ. ಈ ಬಗ್ಗೆ ಚುನಾವಣಾಧಿಕಾರಿಗಳು ಮತ್ತು ರಾಜಕಾರಣಿಗಳ ನಡುವೆ ವಾಗ್ವಾದ ನಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಜಿಲ್ಲಾಧಿಕಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾನೆಲ್ ಸುದ್ದಿಯನ್ನು ಹಿಂಪಡೆದಿದೆ ಎಂದು ಪೊಲೀಸರು ಫೇಸ್‌ಬುಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಮತ್ತು ದ್ವೇಷಪೂರಿತ ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ರಾಜ್ಯದಲ್ಲಿ 24x7 ಸೈಬರ್ ಗಸ್ತು ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.