ಕೋಟಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.;
Competitive Exam| ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬಿಹಾರದ ಮೋತಿಹಾರಿ ನಿವಾಸಿ ಆಯುಷ್ ಜೈಸ್ವಾಲ್ ಎಂದು ತಿಳಿದುಬಂದಿದೆ. ಈತ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಮಹಾವೀರ್ ನಗರ ಪ್ರದೇಶದ ಸಾಮ್ರಾಟ್ ಚೌಕ್ ಬಳಿಯ ಪೇಯಿಂಗ್ ಗೆಸ್ಟ್‌ಹೌಸ್‌ನಲ್ಲಿ ತಂಗಿದ್ದರು. ತಮ್ಮ ಕೊಠಡಿಯಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಆತನ ಸ್ನೇಹಿತರು ಪೇಯಿಂಗ್ ಗೆಸ್ಟ್ ಹೌಸ್ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
'ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಆತನ ಕುಟುಂಬ ಸದಸ್ಯರು ಇಲ್ಲಿಗೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು' ಎಂದು ಮಹಾವೀರ್ ನಗರ ಎಸ್‌ಎಚ್‌ಒ ಮಹೇಂದ್ರ ಮಾರು ತಿಳಿಸಿದ್ದಾರೆ.
ಕಳೆದ ಜನವರಿಯಿಂದ ಈವರೆಗೆ, ದೇಶದ ಸ್ಪರ್ಧಾತ್ಮಕ ಪರೀಕ್ಷೆಗಳ ಕೇಂದ್ರ ಎಂದೇ ಜನಪ್ರಿಯವಾಗಿರುವ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ 11ನೇ ಪ್ರಕರಣ ಇದಾಗಿದೆ.