
ವರದಿ ಅಧ್ಯಯನಕ್ಕೆ ಇನ್ನಷ್ಟು ಸಮಯ: ಮುಖ್ಯಮಂತ್ರಿ ಸಲಹೆಗಾರ ಬಸವರಾಜ ರಾಯರೆಡ್ಡಿ
ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಕುರಿತಂತೆ ಇಂದು (ಗುರುವಾರ) ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವರದಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಆತುರಪಡುತ್ತಿಲ್ಲ. ಬದಲಿಗೆ ವರದಿ ಕುರಿತು ಅಧ್ಯಯನಕ್ಕೆ ಇನ್ನಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ಜಾತಿಗಣತಿ ವರದಿ ಮಂಡನೆ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆದಿದ್ದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ವರದಿಗೆ ವಿರೋಧ ವ್ಯಕ್ತವಾಗಿದೆ. ವೀರಶೈವ-ಲಿಂಗಾಯತರು ಹಾಗೂ ಬ್ರಾಹ್ಮಣರ ಬೆಂಬಲ ಪಡೆದು ರಾಜ್ಯಾದ್ಯಂತ ಆಂದೋಲನ ರೂಪಿಸುವುದಾಗಿ ಒಕ್ಕಲಿಗರ ಸಂಘ ಎಚ್ಚರಿಸಿದೆ. ಹೀಗಿರುವಾಗ ಸರ್ಕಾರಕ್ಕೆ ವರದಿಯ ಕೂಲಂಕಷ ಅಧ್ಯಯನ ನಡೆಸುವುದು ಅನಿವಾರ್ಯವಾಗಿದೆ. ಈ ವಿಚಾರದಲ್ಲಿ ವಿಸ್ತೃತ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.