
ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾಗಿರುವ ಕಾರು
ವಿವಿಧೆಡೆ ಭೀಕರ ಅಪಘಾತ; ಮೂವರು ಸಾವು, ಹಲವು ಮಂದಿಗೆ ಗಾಯ
ಮೃತರನ್ನು ಬೆಂಗಳೂರು ಮೂಲದ ಮಮತಾ (36) ಮತ್ತು ಆಕೆಯ ಪುತ್ರಿ ಧೃತಿಕಾ (14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಮತಾ ಅವರ ಪತಿ ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಹಾಗೂ ಕಾರು ಚಾಲಕ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದಾರೆ,
ನಿಂತಿದ್ದ ಕಂಟೈನರ್ ಲಾರಿಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಬೆಂಗಳೂರು ಮೂಲದ ಮಮತಾ (36) ಮತ್ತು ಆಕೆಯ ಪುತ್ರಿ ಧೃತಿಕಾ (14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಮತಾ ಅವರ ಪತಿ ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಹಾಗೂ ಕಾರು ಚಾಲಕ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಬೆಂಗಳೂರಿನ ಈ ಕುಟುಂಬವು ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಿ, ಮುರುಡೇಶ್ವರ ಮತ್ತು ಗೋಕರ್ಣ ದರ್ಶನಕ್ಕಾಗಿ ಬೈಂದೂರು ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ನಾವುಂದ ತಲುಪುತ್ತಿದ್ದಂತೆ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಗೆ ಕಾರು ಹಿಂಬದಿಯಿಂದ ಬಲವಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ತಾಯಿ-ಮಗಳು ದಾರುಣವಾಗಿ ಮೃತಪಟ್ಟಿದ್ದಾರೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲು
ಗಾಯಗೊಂಡಿರುವ ತಂದೆ ರಾಘು ಹಾಗೂ ಇಬ್ಬರು ಮಕ್ಕಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಕಿರಣ್ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಸ್ ಡಿಕ್ಕಿಯಾಗಿ ಮಹಿಳೆ ಸಾವು
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕುಂಚಿಗನಾಳ್ ಬಳಿ ನಡೆದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು
ಹೊಸಕೇಟೆ- ಕೋಲಾರ ಹೆದ್ದಾರಿಯಲ್ಲಿನ ಹಲಸಹಳ್ಳಿ ಗೇಟ್ ಬಳಿ ಯೂಟರ್ನ್ ಪಡೆಯುತ್ತಿದ್ದ ಟ್ರಕ್ ಗೆ ಕಾರು ಡಿಕ್ಕಿಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ. ಟ್ರಕ್ ಚಾಲಕ ಪರಾರಿಯಾಗಿದ್ದು, ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

