ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಕಾರು, ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ದುರ್ಮರಣ
x

ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಕಾರು, ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ದುರ್ಮರಣ

ಘಟನೆಯ ಮಾಹಿತಿ ತಿಳಿದ ತಕ್ಷಣವೇ ರಾಂಪುರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.


Click the Play button to hear this message in audio format

ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ರವಿಚಂದ್ರ (40) ಹಾಗೂ ಸಂತೋಷ್ (25) ಎಂದು ಗುರುತಿಸಲಾಗಿದೆ. ಅವರಿಬ್ಬರೂ ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿಯತ್ತ ಪ್ರಯಾಣ ಬೆಳೆಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ರಾಜಾಪುರ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ, ರಸ್ತೆಯ ಡಿವೈಡರ್ ಹಾರಿದ ಕಾರು, ವಿರುದ್ಧ ದಿಕ್ಕಿನಲ್ಲಿ (ಬಳ್ಳಾರಿಯಿಂದ ಚಳ್ಳಕೆರೆ ಕಡೆಗೆ) ಬರುತ್ತಿದ್ದ ಲಾರಿಗೆ ಮುಖಾಮುಖಿಯಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ರವಿಚಂದ್ರ ಹಾಗೂ ಸಂತೋಷ್ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣವೇ ರಾಂಪುರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಭೀಕರ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಘಟನೆಗೆ ಸಂಬಂಧಿಸಿದಂತೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More
Next Story