
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ ಪಾತ್ರೆ ಅಂಗಡಿ, ಮೆಡಿಕಲ್ ಸ್ಟೋರ್ ಹಾಗೂ ಪ್ರಾವಿಷನ್ ಸ್ಟೋರ್ ಸುಟ್ಟು ಭಸ್ಮವಾಗಿವೆ.
ಮಂಡ್ಯದಲ್ಲಿ ಭೀಕರ ಅಗ್ನಿ ಅವಘಡ: ಮೂರು ಅಂಗಡಿಗಳು ಸುಟ್ಟು ಭಸ್ಮ
ಚಿನಕುರಳಿ ಗ್ರಾಮದ ಮಹದೇವ್ ಎಂಬುವವರಿಗೆ ಸೇರಿದ ವಾಣಿಜ್ಯ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ರವಿ ಎಂಬುವವರಿಗೆ ಸೇರಿದ ಪಾತ್ರೆ ಅಂಗಡಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ವಿಶೇಷ ಪೂಜೆ ಸಲ್ಲಿಸಲಾಗಿತ್ತು.
ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಂಡ್ಯ ಜಿಲ್ಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅನಾಹುತಕ್ಕೆ ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅಂಗಡಿ ಮಾಲೀಕರು ಅಪಾರ ನಷ್ಟ ಅನುಭವಿಸಿದ್ದಾರೆ.
ಚಿನಕುರಳಿ ಗ್ರಾಮದ ಮಹದೇವ್ ಎಂಬುವವರಿಗೆ ಸೇರಿದ ವಾಣಿಜ್ಯ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ರವಿ ಎಂಬುವವರಿಗೆ ಸೇರಿದ ಪಾತ್ರೆ ಅಂಗಡಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಏಕಾಏಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪರಿಣಾಮ ಪಕ್ಕದಲ್ಲಿದ್ದ ಮೆಡಿಕಲ್ ಸ್ಟೋರ್ ಹಾಗೂ ಪ್ರಾವಿಷನ್ ಸ್ಟೋರ್‌ಗೂ ಬೆಂಕಿ ತಗುಲಿದೆ. ಮೂರು ಅಂಗಡಿಗಳಲ್ಲಿದ್ದ ಪಾತ್ರೆಗಳು, ಔಷಧಿಗಳು ಹಾಗೂ ದಿನಸಿ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ
ಅಗ್ನಿ ಅವಘಡದಿಂದಾಗಿ ಮೂರು ಅಂಗಡಿಗಳ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಕಟ್ಟಡದ ಇತರೆ ಭಾಗಗಳಿಗೆ ಬೆಂಕಿ ಹರಡುವುದನ್ನು ತಡೆಯಲಾಗಿದೆ. ಕ್ಯಾತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
