
ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ, ಐವರ ದುರ್ಮರಣ
ತುಮಕೂರು ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ, ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ
ನೆಲಮಂಗಲದ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಇಂಡಿಕಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ (ಫೆಬ್ರವರಿ 15) ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರ ಮೂಲದ ಹರ್ಷಿತ್ ಮತ್ತು ನಿಖಿತ್ ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ತುಮಕೂರು ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ, ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯಾರ್ಥಿಯ ದುರಂತ ಅಂತ್ಯ
ಮೃತಪಟ್ಟವರಲ್ಲಿ ಒಬ್ಬರಾದ ಹರ್ಷಿತ್, ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಭಾನುವಾರ ರಜೆಯ ಮೋಜಿನಲ್ಲಿದ್ದ ಯುವಕರ ಜೀವನ ರಸ್ತೆ ಅವಘಡದಲ್ಲಿ ಅಂತ್ಯಗೊಂಡಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತನೂ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರು ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡುವ ಕಾರ್ಯ ಮುಂದುವರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

