
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿ ಜೊತೆ ಅನುಚಿತ ವರ್ತನೆ ಆರೋಪ: ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್
ಮಕ್ಕಳ ಹಕ್ಕುಗಳ ಆಯೋಗದ ಸೂಚನೆಯ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (CDPO) ಗೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸ್ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಮಲ್ಲಿಕಾರ್ಜುನ ಮುತ್ಯಾ ಅವರು ಅಪ್ರಾಪ್ತ ಬಾಲಕಿಯನ್ನು ತಮ್ಮ ತೊಡೆಯ ಮೇಲೆ ಕುರಿಸಿಕೊಂಡು ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳುಳ್ಳ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು ಗಮನಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಧಿಕೃತ ಪತ್ರ ಬರೆದಿದ್ದರು.
ಪೋಕ್ಸೋ ಅಡಿ ಎಫ್‌ಐಆರ್ ದಾಖಲು
ಮಕ್ಕಳ ಹಕ್ಕುಗಳ ಆಯೋಗದ ಸೂಚನೆಯ ಮೇರೆಗೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (CDPO) ಗೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಅರೆಸ್ಟ್ ಭೀತಿಯಲ್ಲಿ ಮುತ್ಯಾ
ಪ್ರಕರಣ ದಾಖಲಾಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಮುತ್ಯಾ ತಲೆಮರೆಸಿಕೊಳ್ಳುವ ಸಾಧ್ಯತೆಗಳಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಪೋಕ್ಸೋ ಪ್ರಕರಣವಾಗಿರುವುದರಿಂದ ಯಾವುದೇ ಕ್ಷಣದಲ್ಲಿಯೂ ಪೊಲೀಸರು ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಈ ಘಟನೆ ದೊಡ್ಡ ಚರ್ಚೆಗೆ ಗ್ರಾಸವಾಗಿದ್ದು, ಭಕ್ತ ವಲಯದಲ್ಲಿಯೂ ಸಂಚಲನ ಮೂಡಿಸಿದೆ.

