
ಸಚಿವ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಬಾವನ ಮನೆ ಮೇಲೆ ಇಡಿ ದಾಳಿ; ಬೆಳಗಾವಿಯಲ್ಲಿ 6 ಕಡೆ ಶೋಧ
ಬೆಳಗಾವಿಯಲ್ಲಿ ಇಡಿ ಅಧಿಕಾರಿಗಳು ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ನಿವಾಸ ಸೇರಿ 6 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಭಾವನಾಗಿರುವ ಮಂಜುನಾಥ್ ಅವರ ಮನೆಗೆ ಗೋವಾ ಮತ್ತು ಬೆಂಗಳೂರು ಇಡಿ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಾವ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಮಂಗಳವಾರ ಬೆಳಗ್ಗಿನ ಜಾವ ಬೆಳಗಾವಿಯಲ್ಲಿರುವ ವೈ ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ದೂರದರ್ಶನ ನಗರದಲ್ಲಿರುವ ವೈ ಮಂಜುನಾಥ್ ಅವರ ನಿವಾಸಕ್ಕೆ ಗೋವಾ ಮತ್ತು ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ಭೇಟಿ ನೀಡಿ ಶೋಧ ಕಾರ್ಯ ಕೈಗೊಂಡಿದ್ದಾರೆ. ದಾಳಿಯ ವೇಳೆ ಹಲವು ದಾಖಲೆಗಳು ಹಾಗೂ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿರುವುದಾಗಿ ತಿಳಿದುಬಂದಿದೆ.
ವೈ ಮಂಜುನಾಥ್ ಅವರು ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿರುವುದರಿಂದ ಈ ದಾಳಿ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.
ಇಡಿ ಅಧಿಕಾರಿಗಳು ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದಾರೆ ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ದಾಳಿ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇಡಿ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

