
Bagalkot News| ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಿಷೇಧಾಜ್ಞೆ ಜಾರಿ
Bagalkot Stone Pelting|ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ ಹಾಗೂ ಮಸೀದಿಯ ಗುಮ್ಮಟಕ್ಕೆ ಹಾನಿಯಾಗಿದೆ.
ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ವಹಿಸಿದೆ.
ಶಿವಾಜಿ ಜಯಂತಿ ಮೆರವಣಿಗೆಯು ಕಿಲ್ಲಾ ಓಣಿಯ ಮಸೀದಿ ಬಳಿ ಸಾಗುತ್ತಿದ್ದಾಗ ಹಠಾತ್ತನೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮೆರವಣಿಗೆಯಲ್ಲಿದ್ದ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಕೆಲ ಸಾರ್ವಜನಿಕರಿಗೂ ಗಾಯಗಳಾಗಿವೆ.
ಮಸೀದಿಯ ಗುಮ್ಮಟಕ್ಕೆ ಹಾನಿ: ಹೆಚ್ಚಿದ ಆಕ್ರೋಶ
ಮತ್ತೊಂದೆಡೆ, ನವನಗರದ ಈದ್ಗಾ ಮೈದಾನದ ಬಳಿಯ ಮಸೀದಿಯ ಮೂರು ಗುಮ್ಮಟಗಳನ್ನು ಕಿಡಿಗೇಡಿಗಳು ಕೆಡವಿ, ಗೋಡೆಯ ಮೇಲೆ 'ಓಂ' ಎಂದು ಬರೆದಿರುವ ಘಟನೆ ವರದಿಯಾಗಿದೆ. ಈ ಘಟನೆಯು ನಗರದಲ್ಲಿ ಮತ್ತಷ್ಟು ಉದ್ವಿಗ್ನತೆ ಸೃಷ್ಟಿಸಿದ್ದು, ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದೆ.
ತಳ್ಳುಗಾಡಿ ವ್ಯಾಪಾರಿಯ ಗೋಳಾಟ
ಕಲ್ಲು ತೂರಾಟದ ಬೆನ್ನಲ್ಲೇ ಕಿಡಿಗೇಡಿಗಳು ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮ ತಳ್ಳುಗಾಡಿಯಲ್ಲಿದ್ದ ಚಿಲ್ಲರೆ ಹಣ, ತಕ್ಕಡಿ ಎಲ್ಲವೂ ಸುಟ್ಟು ಭಸ್ಮವಾಗಿವೆ. ಬಡವರ ಹೊಟ್ಟೆ ಮೇಲೆ ಹೊಡೆದರೆ ಜೀವನ ಮಾಡುವುದು ಹೇಗೆ? ಎಂದು ಸಂತ್ರಸ್ತ ವ್ಯಾಪಾರಿ ಜನ್ನತಬಿ ದೊಡ್ಡಮನಿ ಅಳಲು ತೋಡಿಕೊಂಡಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್, ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲದ ಬಳಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಫೆ.24ರವರೆಗೆ ನಿಷೇಧಾಜ್ಞೆ ಜಾರಿ
ಪರಿಸ್ಥಿತಿ ಕೈಮೀರದಂತೆ ತಡೆಯಲು ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್, ಅವರು ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಇನ್ನೊಂದೆಡೆ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ಬಂಧನ ವಿಳಂಬವಾದರೆ ಬಾಗಲಕೋಟೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ನವನಗರದ ಈದ್ಗಾ ಮೈದಾನದ ಬಳಿಯ ಮಸೀದಿಯ ಮೂರು ಗುಮ್ಮಟಗಳನ್ನು ಕಿಡಿಗೇಡಿಗಳು ಕೆಡವಿ, ಗೋಡೆಯ ಮೇಲೆ ಓಂ ಎಂದು ಬರೆದಿರುವ ಘಟನೆಯೂ ವರದಿಯಾಗಿದೆ. ಈ ಘಟನೆಯಿಂದಾಗಿ ನಗರದಲ್ಲಿ ಮತ್ತಷ್ಟು ಆಕ್ರೋಶ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತವು ಮುಂದಿನ ಮೂರು ದಿನಗಳ ಕಾಲ ನಿಷೇಧಾಜ್ಞೆಯನ್ನು ವಿಸ್ತರಿಸಿದೆ.

