
ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ತಾಯಿ ವಿಧಿವಶರಾಗಿದ್ದಾರೆ.
ನಟ ಪ್ರಕಾಶ್ ರಾಜ್‌ಗೆ ಮಾತೃವಿಯೋಗ: ತಾಯಿ ಸ್ವರ್ಣಲತಾ ಬೆಂಗಳೂರಿನಲ್ಲಿ ವಿಧಿವಶ
ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (86) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಅವರು ಸೋಮವಾರ ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಮೂಲತಃ ಕನ್ನಡಿಗರಾದ ಪ್ರಕಾಶ್ ರಾಜ್ ಅವರು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ತಾಯಿಯ ಅಗಲಿಕೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ.
ಪ್ರಕಾಶ್ ರಾಜ್ ಅವರ ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದ ಅನೇಕ ನಟ-ನಟಿಯರು ಹಾಗೂ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದಾರೆ. ತಾಯಿಯನ್ನು ಕಳೆದುಕೊಂಡ ಪ್ರಕಾಶ್ ರಾಜ್ ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅಭಿಮಾನಿಗಳು ಕೂಡ ಪ್ರಾರ್ಥಿಸುತ್ತಿದ್ದಾರೆ.
ಪ್ರಸ್ತುತ ಪ್ರಕಾಶ್ ರಾಜ್ ಅವರು ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಸ್ಪಿರಿಟ್' ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.

