
ಯುಗಾದಿ ಹಬ್ಬಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಹೊಸ ಪೋಸ್ಟರ್ ಬಿಡುಗಡೆ
ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.
ನಾಡಿನೆಲ್ಲೆಡೆ ಈಗ ಯುಗಾದಿ ಹಬ್ಬದ ಸಡಗರ. ಈ ಹಬ್ಬದ ಸಂಭ್ರಮಕ್ಕಾಗಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ನಿಮ್ಮ ನೆಚ್ಚಿನ ಚಿತ್ರಮಂದಿರಗಳಿಗೆ ಬರಲಿದೆ.
ಕನ್ನಡದಲ್ಲಿ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ʼಕೃಷ್ಣಂ ಪ್ರಣಯ ಸಖಿʼ ಚಿತ್ರಕ್ಕಿದೆ.
ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ʼಕೃಷ್ಣಂ ಪ್ರಣಯ ಸಖಿʼ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.