
ನಟ ಯಶ್ ಅಭಿನಯದ ಮತ್ತು ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದ ಟೀಸರ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
'ಟಾಕ್ಸಿಕ್' ಟೀಸರ್ ವಿವಾದ: ಮಹಿಳಾ ಆಯೋಗಕ್ಕೆ ಎಎಪಿ ದೂರು
ಎಎಪಿ ಮಹಿಳಾ ಘಟಕದ ದೂರಿನ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ಪತ್ರ ಬರೆದಿದ್ದು, ಟೀಸರ್‌ನ ದೃಶ್ಯಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟೀಸರ್‌ನಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕವು ಸೋಮವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.
ಎಎಪಿ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ನೇತೃತ್ವದ ನಿಯೋಗವು ಮಹಿಳಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. "ಟೀಸರ್‌ನಲ್ಲಿರುವ ಹಸಿಬಿಸಿ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿವೆ ಮತ್ತು ಕನ್ನಡ ಸಂಸ್ಕೃತಿಗೆ ಅಪಮಾನ ಮಾಡುವಂತಿವೆ. ಯಾವುದೇ ವಯೋಮಿತಿ ಎಚ್ಚರಿಕೆ ಇಲ್ಲದೆ ಈ ದೃಶ್ಯಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿರುವುದು ಮಕ್ಕಳು ಮತ್ತು ಯುವಜನತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ," ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೂಡಲೇ ಈ ಟೀಸರ್ ಅನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ಮತ್ತು ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳಲು ಅವರು ಆಗ್ರಹಿಸಿದ್ದಾರೆ.
ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗವು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ಪತ್ರ ಬರೆದಿದೆ. ದೂರಿನಲ್ಲಿರುವ ಅಂಶಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಜರುಗಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಆಯೋಗದ ಕಾರ್ಯದರ್ಶಿಗಳು ಸಿಬಿಎಫ್‌ಸಿಗೆ ಸೂಚಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತರ ಆಕ್ರೋಶ
ಮತ್ತೊಂದೆಡೆ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರೂ ಸಹ ಸೆನ್ಸಾರ್ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಶಿ ಅವರಿಗೆ ದೂರು ಸಲ್ಲಿಸಿದ್ದಾರೆ. "ಟೀಸರ್‌ನಲ್ಲಿರುವ ದೃಶ್ಯಗಳು ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಿತಿ ಮೀರಿವೆ. ಸಂವಿಧಾನವು ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವು ಅಶ್ಲೀಲತೆಗೆ ಅವಕಾಶ ನೀಡುವುದಿಲ್ಲ," ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರವು ಯಶ್ ಅವರ 40ನೇ ಹುಟ್ಟುಹಬ್ಬದ ಅಂಗವಾಗಿ ಜನವರಿ 8 ರಂದು ಟೀಸರ್ ಬಿಡುಗಡೆ ಮಾಡಿತ್ತು. ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರವು ಮಾರ್ಚ್ 19 ರಂದು ತೆರೆಕಾಣಲು ಸಜ್ಜಾಗುತ್ತಿದೆ.

