ಆರ್‌ಎಸ್‌ಎಸ್‌ ನಿಷೇಧ : ಪ್ರಿಯಾಂಕ ಖರ್ಗೆ ಹೇಳಿಕೆಯಲ್ಲಿ ತಪ್ಪಿಲ್ಲ, ವರದಿ ಬಳಿಕ ಕ್ರಮ- ಸಿಎಂ
x

ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ನಿಷೇಧ : ಪ್ರಿಯಾಂಕ ಖರ್ಗೆ ಹೇಳಿಕೆಯಲ್ಲಿ ತಪ್ಪಿಲ್ಲ, ವರದಿ ಬಳಿಕ ಕ್ರಮ- ಸಿಎಂ

ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮಿಳುನಾಡಿನಲ್ಲಿ ಆರ್‌.ಎಸ್‌.ಎಸ್‌ ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ ಎಂದರು.


Click the Play button to hear this message in audio format

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸುವ ಕುರಿತು ಪ್ರಸ್ತಾಪಿಸಿದ್ದ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆದಾಗ್ಯೂ, ಪ್ರಿಯಾಂಕ್‌ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿಲ್ಲ, ಇಂಥಾ ಬೆದರಿಕೆಗಳಿಗೆ ಸರ್ಕಾರ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬುಧವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದನ್ನು ಖುದ್ದು ಸಚಿವರೇ ಆಡಿಯೋ ಬಿಡುಗಡೆ ಮಾಡಿ ಹೇಳಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಈಗಾಗಲೇ ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿಯಲ್ಲಿ ನಿಷೇಧ ಹೇರಲಾಗಿದೆ ಎಂಬ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ವರದಿ ನಂತರ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು. ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ರಕ್ಷಣೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಬೆದರಿಕೆಗೆ ಹೆದರುವುದಿಲ್ಲ

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುತ್ತವೆ. ಬೆದರಿಕೆಗಳಿಗೆ ಪ್ರಿಯಾಂಕ್‌ ಖರ್ಗೆ ಹೆದರುವುದಿಲ್ಲ. ನಾನೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಶ್ರೀನಿವಾಸಪುರದ ಜೆಡಿಎಸ್‌ ಶಾಸಕ ವೆಂಕಟಶಿವಾರೆಡ್ಡಿ ಹೈಕೋರ್ಟ್‌ ಮೊರೆ ಹೋಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ನವರು ಆಡಳಿತದಲ್ಲಿ ಇದ್ದಾಗ ನಮ್ಮ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದರು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ತಾಕತ್ತಿದ್ದರೆ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ, ಸೋತು ಹೋದರು ಎಂದು ಮುಖ್ಯಮಂತ್ರಿ ಟೀಕಿಸಿದ್ದಾರೆ.

Read More
Next Story