ಕಲಬುರಗಿ ಸ್ಮಾರ್ಟ್​ ಸಿಟಿ ಯೋಜನೆಗೆ 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ ಸ್ಮಾರ್ಟ್​ ಸಿಟಿ ಯೋಜನೆಗೆ 1685 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ ನಗರವನ್ನು ರಾಜ್ಯ ಸರ್ಕಾರದ ವತಿಯಿಂದಲೇ 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.


Click the Play button to hear this message in audio format

ಕಲಬುರಗಿ ನಗರವನ್ನು ರಾಜ್ಯ ಸರ್ಕಾರದ ವತಿಯಿಂದಲೇ 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಲಬುರಗಿ ನಗರದ ಪೊಲೀಸ್‌ ಪರೇಡ್ ಮೈದಾನದಲ್ಲಿ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್​​ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ವಿವಿಧ ಯೋಜನೆ ಅನುಷ್ಠಾನಕ್ಕೆ ಸಿದ್ದರಾಮಯ್ಯ ಭರವಸೆ

ತಮ್ಮ ಸರ್ಕಾರ ಈ ಭಾಗದ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ ಹಲವು ಯೋಜನೆಗಳನ್ನು ವಿವರಿಸಿದ ಅವರು, ಹೈದರಾಬಾದ್ ನಿಜಾಮರ ಆಡಳಿತದಿಂದ ಈ ಭಾಗದ ಜನತೆಗೆ ಒಂದು ವರ್ಷ ತಡವಾಗಿ ವಿಮೋಚನೆ ದೊರಕಿತು. ಆಗಿನಿಂದಲೂ ಆರ್ಥಿಕವಾಗಿ ಹಿಂದುಳಿದ ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ, ಎನ್. ಧರಂಸಿಂಗ್ ಅವರ ಪ್ರಯತ್ನದ ಫಲವಾಗಿ 371 (ಜೆ) ಸಂವಿಧಾನ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಅದರ ಭಾಗವಾಗಿ ರಚನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಪ್ರತಿವರ್ಷ 5000 ರೂ ಕೋಟಿ ಅನುದಾನ ನೀಡುತ್ತಿದೆ ಎಂದರು.

ಮಂಡಳಿಯ 262 ರೂ ಕೋಟಿ ನೆರವಿನೊಂದಿಗೆ ಕಲಬುರಗಿಯಲ್ಲಿ ಸುಸಜ್ಜಿತ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಕಟ್ಟಡದ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಶಯದಂತೆ ಕಲಬುರಗಿಯನ್ನು ಪ್ರಾದೇಶಿಕ ಆರೋಗ್ಯ ಕೇಂದ್ರವಾಗಿಸಲು ಹೆಜ್ಜೆ ಇಟ್ಟಿದ್ದೇವೆ ಎಂದರು.

ಕೆಕೆಆರ್ ಡಿಬಿಗೆ ಕಳೆದ ಹತ್ತು ವರ್ಷಗಳಲ್ಲಿ 19,778 ರೂ. ಕೋಟಿ ಹಂಚಿಕೆ ಮಾಡಿ, 13,229 ರೂ. ಕೋಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಇದುವರೆಗೆ 11,174 ರೂ. ಕೋಟಿ ಖರ್ಚು ಮಾಡಲಾಗಿದೆ. ಶೇ. 85ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದರು.

ಬೀದ‌ರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಿದ್ದೇವೆ. ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರ ಸರ್ಕಾರ ಕೂಡಲೇ ಏಮ್ಸ್ ಸಂಸ್ಥೆ ಆರಂಭಿಸಲು ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಕಲಬುರಗಿ ಹೊರವಲಯದ ನದಿಸಿನ್ನೂರು ಬಳಿ ಕೇಂದ್ರ ರಾಜ್ಯದ ಸಹಭಾಗಿತ್ವದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಪ್ರಸಕ್ತ ಬಜೆಟ್ ನಲ್ಲಿ 50 ರೂ. ಕೋಟಿ ಒದಗಿಸಲಾಗಿದೆ. ರಾಯಚೂರಿನಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ನೂತನ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುವುದು ಎಂದರು.

ಇಂದು ಸಂಜೆ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ ಮುಂತಾದ ಮೂಲಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದರು.

10 ವರ್ಷಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯ ನಂತರ ಇಂದು ಸಂಜೆ ಕಲಬುರಗಿಯಲ್ಲಿ ಅತ್ಯಂತ ಮಹಾತ್ವಾಕಾಂಕ್ಷೆಯ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ. ಸದರಿ ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ, ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು.

Read More
Next Story