
2018ರ ಮೈಕೋ ಲೇಔಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
2018ರ ಜೂನ್ 26 ರಂದು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಅಜಯ್ ಅವರು ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
2018ರಲ್ಲಿ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಶಸ್ವಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದ ಪೊಲೀಸರ ಕಾರ್ಯಕ್ಕೆ ಮಹತ್ವದ ಜಯ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಇಬ್ಬರು ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದೆ.
2018ರ ಜೂನ್ 26 ರಂದು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಅಜಯ್ ಅವರು ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
ಪೊಲೀಸರ ಯಶಸ್ವಿ ತನಿಖೆ
ತನಿಖೆಯನ್ನು ಚುರುಕುಗೊಳಿಸಿದ ಇನ್ಸ್‌ಪೆಕ್ಟರ್ ಅಜಯ್ ಮತ್ತು ಅವರ ತಂಡ, ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನಗರದ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ, ಸರ್ಕಾರದ ಪರವಾಗಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಮಹಾಲಿಂಗಪ್ಪ ಅವರು, ಆರೋಪಿಗಳ ವಿರುದ್ಧದ ಸಾಕ್ಷ್ಯಗಳನ್ನು ಸಮರ್ಥವಾಗಿ ಮಂಡಿಸಿದರು. ಸುದೀರ್ಘ ವಿಚಾರಣೆಯ ನಂತರ, ಅಕ್ಟೋಬರ್ 27ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ, ಇಬ್ಬರೂ ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

