50,000 Cusecs Released from KRS Dam: Flood Fear in Cauvery Valley
x

ಕೆಆರ್‌ಎಸ್‌ ಜಲಾಶಯ

ಕೆಆರ್​ಎಸ್​​ ಜಲಾಶಯದಿಂದ 50,000 ಕ್ಯೂಸೆಕ್ ನೀರು ಹೊರಕ್ಕೆ: ಕಾವೇರಿ ಕಣಿವೆಯಲ್ಲಿ ಪ್ರವಾಹದ ಆತಂಕ

ಕೇವಲ ಕಾವೇರಿ ಕಣಿವೆ ಮಾತ್ರವಲ್ಲದೆ, ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.


ಕಾವೇರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆಆರ್​ಎಸ್​​) ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಏರಿಕೆಯಾಗಿದೆ. ಪರಿಣಾಮವಾಗಿ, ಅಣೆಕಟ್ಟೆಯಿಂದ 50,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್​ಎಸ್​​ ಜಲಾಶಯವು ಈ ಬಾರಿ ಮುಂಗಾರಿನ ಆರಂಭದಲ್ಲೇ, ಅಂದರೆ ಜೂನ್ ಮೊದಲ ವಾರದಲ್ಲಿಯೇ ಸಂಪೂರ್ಣ ಭರ್ತಿಯಾಗಿತ್ತು. ಇದೀಗ ಮತ್ತೆ ಮಳೆ ಅಬ್ಬರಿಸುತ್ತಿರುವುದರಿಂದ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.

ಕೇವಲ ಕಾವೇರಿ ಕಣಿವೆ ಮಾತ್ರವಲ್ಲದೆ, ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ ಇನ್ನು ಕೆಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.

ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಇದೇ ರೀತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕುಗಳಲ್ಲಿ, ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆಲವು ಭಾಗಗಳಲ್ಲಿ, ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ಮಳೆಬಾಧಿತ ಹೋಬಳಿಗಳಲ್ಲಿ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ಹಾಗೂ ಸವದತ್ತಿ ತಾಲೂಕುಗಳ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿದೆ.

Read More
Next Story