
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್
ಸರ್ಕಾರಕ್ಕೆ ಉಪಲೋಕಾಯುಕ್ತರಿಂದ 'ಭ್ರಷ್ಟಾಚಾರದ ಸರ್ಟಿಫಿಕೇಟ್': ಸಿಎಂ, ಡಿಸಿಎಂ ರಾಜೀನಾಮೆಗೆ ಅಶೋಕ್ ಆಗ್ರಹ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. 40 ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಇಲ್ಲ ಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಆರ್. ಅಶೋಕ್ ಆರೋಪ ಮಾಡಿದ್ದಾರೆ.
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63 ಭ್ರಷ್ಟಾಚಾರ ಇದೆ ಎಂದು ಸ್ವತಃ ಉಪಲೋಕಾಯುಕ್ತರೇ ಸರ್ಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಗುರುವಾರ(ಡಿ.4) ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಸಂದೇಶ ಹಾಕಿರುವ ಅವರು, ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪಲೋಕಾಯುಕ್ತರೇ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೈತಿಕ ಹೊನೆ ಹೊತ್ತು ರಾಜೀನಾಮೆ ಕೊಡುತ್ತೀರಾ ಅಥವಾ ಇದೇ ರೀತಿ ಮುಂದುವರೆಸುತ್ತಿರಾ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. 40 ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಇಲ್ಲ ಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರಂಟಿ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಉಪ ಲೋಕಾಯುಕ್ತರು ಹೇಳಿದ್ದೇನು ?
ಹೈಕೋರ್ಟ್‌ನ ಸಭಾಂಗಣದಲ್ಲಿ ವಕೀಲ ತುಳವನೂರು ಶಂಕರಪ್ಪ ಬರೆದಿರುವ 'ಓವರ್‌ಸೀಸ್ ಟ್ರಾವೆಲಾಗ್' ಪ್ರವಾಸ ಕಥನವನ್ನು ಬಿಡುಗಡೆ ಮಾಡಿ ಮಾತನಾಡಿದ ಉಪಲೋಕಾಯುಕ್ತ ನ್ಯಾ.ವೀರಪ್ಪ, ಕೇರಳದಲ್ಲಿ ಶೇ. 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೆ ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ದಕ್ಕಿದೆ ಎಂದು ಹೇಳಿದ್ದರು.
'ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನ ಪಡೆದಿದೆ. ಈ ಪಿಡುಗನ್ನು ಕೂಡಲೇ ತಡೆಯದೇ ಹೋದರೆ ಭವಿಷ್ಯದಲ್ಲಿ ಭೀಕರ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದ್ದರು.

