ಬಿಜೆಪಿ ವರ್ಚಸ್ಸಿಗೆ ಧಕ್ಕೆ ಪ್ರಕರಣ | ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ: ಜಾಮೀನು ಮಂಜೂರು
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಚಾರ ಮಾಡಿದ ಪ್ರಕರಣದಲ್ಲಿ ಶುಕ್ರವಾರ (ಜೂ.7) ನಗರದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಿದ್ದು, ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. ಜುಲೈ 30ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಮಾಜಿ ಸಂಸದ ಡಿ.ಕೆ ಸುರೇಶ್, ರಾಹುಲ್ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಂದು ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಆದರೆ, ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ರಾಹುಲ್ ಗಾಂಧಿ ಶುಕ್ರವಾರ ಕೋರ್ಟ್‌ಗೆ ಹಾಜರಾದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿದೆ. ನಾಲ್ಕನೇ ಬಾರಿಯೂ ಸಮನ್ಸ್‌ಗೆ ಬೆಲೆ ನೀಡದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗಬಹುದು ಎಂಬ ಕಾರಣಕ್ಕೆ ರಾಹುಲ್‌ಗಾಂಧಿ ಅವರು ಶುಕ್ರವಾರ ಬೆಳಿಗ್ಗೆ ಕಾವೇರಿ ಭವನ ಹಿಂಭಾಗದ ನಗರ ಸಿವಿಲ್ ನ್ಯಾಯಾಲಯದಲ್ಲಿ ಖುದ್ದು ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ.
ಜೂನ್ 1ರಂದು ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಪರ ವಕೀಲರು ಐಎನ್‌ಡಿಐಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿ ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆ ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿತ್ತು.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾ ದಿನ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತುಗಳು ಮತ್ತು ಪ್ರಚಾರದ ಘೋಷಣೆಗಳನ್ನು ವಿರೋಧಿಸಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಬಿಜೆಪಿಯು ಸಾರ್ವಜನಿಕ ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40% ಕಮಿಷನ್ ಪಡೆಯುತ್ತಿದೆ ಎಂದು ಜಾಹೀರಾತುಗಳಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತನ್ನ ಪಕ್ಷದ ಸದಸ್ಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತನ್ನು ಪ್ರಕಟಿಸಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಆರೋಪಿಸಿತ್ತು.