ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ;  ಕಾಂಗ್ರೆಸ್‌ ಆಕ್ರೋಶ
x

ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ; ಕಾಂಗ್ರೆಸ್‌ ಆಕ್ರೋಶ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ವಿಧಾನ ಪರಿಷತ್‌ ಮುಖ್ಯ ಸಚೇತಕ ರವಿಕುಮಾರ್ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.


ಮಹಿಳೆಯರ ಕುರಿತು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಎಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮುಖ್ಯ ಕಾರ್ಯದರ್ಶಿ ವಿರುದ್ಧ ಕೀಳು ಪದ ಬಳಸಿರುವ ವಿಡಿಯೋ ʼದ ಫೆಡರಲ್‌ ಕರ್ನಾಟಕʼಕ್ಕೆ ಲಭ್ಯವಾಗಿದೆ.

ಬೆಂಗಳೂರಿನ ಕಾಡುಗೋಡಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಎರಡು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರ ಒತ್ತುವರಿ ತೆರವಿಗೆ ಮುಂದಾಗಿರುವ ಭೂಮಿಯಲ್ಲಿ ಪರಿಶಿಷ್ಟ ಜಾತಿಯ ಹಲವು ಕುಟುಂಬಗಳಿದ್ದು, ಕೂಡಲೇ ಒತ್ತುವರಿ ತೆರಗು ಕಾರ್ಯ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು.

ಪ್ರತಿಭಟನೆಯ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಆದರೆ, ಆ ವೇಳೆ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಇರಲಿಲ್ಲ. ಈ ಸಂದರ್ಭದಲ್ಲಿ ಶಾಲಿನಿ ರಜನೀಶ್‌ ಕುರಿತು ಎನ್‌. ರವಿಕುಮಾರ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ದೂರಲಾಗಿದೆ.

ಬಿಜೆಪಿಯ ವಿಧಾನ ಪರಿಷತ್ ಮುಖ್ಯ ಸಚೇತಕರೂ ಆಗಿರುವ ಎನ್‌. ರವಿಕುಮಾರ್ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಮಹಿಳಾ ಆಯೋಗ ಹಾಗೂ ವಿಧಾನ ಪರಿಷತ್‌ ಸಭಾಪತಿಗೆ ದೂರು ನೀಡಲಾಗಿದೆ.

ಲಕ್ಷ್ಮಿ ಹೆಬ್ಬಾಳಕರ್‌ ಆಕ್ರೋಶ

ಮಹಿಳೆಯರ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಕ್ಷಮೆ ಕೇಳಬೇಕು. ಇಲ್ಲವಾದರೆ ಸಾರ್ವಜನಿಕವಾಗಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ರವಿಕುಮಾರ್ ಅವರ ಮನಸ್ಥಿತಿ ಎಂತಹದ್ದು ಎಂದು ತೋರಿಸುತ್ತದೆ. ಅವರ ಮಾತುಗಳು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನವಾಗಿದೆ. ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನ ವೇಳೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದ ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆ ನೀಡದೆ ಜವಾಬ್ದಾರಿಯಿಂದ ವರ್ತಿಸಲಿ ಎಂದು ಕಿಡಿಕಾರಿದ್ದಾರೆ.

ಸಭಾಪತಿಗೆ ದೂರು

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ದ ಎಂಎಲ್‌ಸಿ ರವಿಕುಮಾರ್‌ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌. ಮನೋಹರ್‌‌ ಅವರು, ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದು, ರವಿಕುಮಾರ್‌ ಅವರನ್ನು ಪರಿಷತ್‌ ಸದಸ್ಯ ಸ್ಥಾನದಿಂದ ಅಮಾನತು ಮಾಡುವಂತೆ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ವಿರುದ್ಧ ಹೇಳಿಕೆ ನೀಡಿದ್ದ ರವಿಕುಮಾರ್‌

ಬಿಜೆಪಿ ನಾಯಕರು ಮೇ 24 ರಂದು ಆಯೋಜಿಸಿದ್ದ 'ಕಲಬುರಗಿ ಚಲೋ' ರ್ಯಾಲಿಯಲ್ಲಿ ಎಂಎಲ್‌ಸಿ ರವಿಕುಮಾರ್ ಅವರು, "ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದವರಂತೆ ಕಾಣುತ್ತಿದ್ದಾರೆ" ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಹೈಕೋರ್ಟ್‌ ಕೂಡ ರವಿಕುಮಾರ್‌ ಅವರಿಗೆ ಛೀಮಾರಿ ಹಾಕಿದ ಬಳಿಕ ಕ್ಷಮೆ ಕೋರಿದ್ದರು.

ರವಿಕುಮಾರ್‌ ಹೇಳಿಕೆ ಕುರಿತಾದ ವಿಡಿಯೋ ಇಲ್ಲಿದೆ.



Read More
Next Story