ಸಿಎಂ ಬೆನ್ನಲ್ಲೇ ಎಂಬಿ ಪಾಟೀಲಗೂ ಸಂಕಷ್ಟ | ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ದವೂ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ದೂರು ಸಲ್ಲಿಸಲಾಗಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವರಾಗಿರುವ ಎಂ.ಬಿ. ಪಾಟೀಲ್ಗೆ ಸಂಕಷ್ಟ ಎದುರಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿರುವ ಆರೋಪದ ಮೇಲೆ ಸಚಿವ ಎಂ.ಬಿ.ಪಾಟೀಲ್ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಶುಕ್ರವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ಆರೋಪ ಏನು?
ʻʻಎಂಬಿ ಪಾಟೀಲ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್ಲೈನ್ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ. ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆʼʼ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.