Protest | ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
x
ಅಕ್ಷರ ದಾಸೋಹ ಕಾರ್ಮಿಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು

Protest | ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಬಿಸಿಯೂಟ ಕಾರ್ಮಿಕರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.


ಕನಿಷ್ಠ ವೇತನ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಬಿಸಿಯೂಟ ಕಾರ್ಮಿಕರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಕ್ಷರ ದಾಸೋಹ ಕಾರ್ಮಿಕರ ಗೌರವಧನ ಹೆಚ್ಚಿಸುವ ಕುರಿತು ಈ ಹಿಂದೆ ರಾಜ್ಯ ಸರ್ಕಾರ ನೀಡಿದ್ದ ಭರವಸೆಯನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದರು.

ಪ್ರತಿ ತಿಂಗಳ ಮಾಸಿಕ ವೇತನವನ್ನು 5ರೊಳಗೆ ಪಾವತಿ ಮಾಡಬೇಕು. ತಿಂಗಳ ವೇತನ ಚೀಟಿ ನೀಡಬೇಕು. ಎಲ್ಲಾ ಕಾರ್ಮಿಕರಿಗೂ ಜೀವ ವಿಮೆ ಯೋಜನೆ ಜಾರಿಗೆ ತರಬೇಕು. ಸರ್ಕಾರವೇ ಅದರ ಕಂತಿನ ಮೊತ್ತ ಪಾವತಿಸಬೇಕು. ಬಿಸಿಯೂಟ ಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕು. ಕಾರ್ಮಿಕರಿಗೆ 10 ತಿಂಗಳ ಬದಲು 12 ತಿಂಗಳ ಗೌರವಧನ ಪಾವತಿಸಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ಕಾರ್ಮಿಕರ ಸೇವೆ ಕಾಯಂಗೊಳಿಸಿ, ಸೇವಾ ಭದ್ರತೆ ಒದಗಿಸಬೇಕು. ಬರಗಾಲದ ಕಾರಣ ನೀಡಿ ಕಳೆದ ವರ್ಷದ ಏಪ್ರಿಲ್ ಹಾಗೂ ಮೇ ತಿಂಗಳ ಗೌರವಧನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ತಕ್ಷಣವೇ ಆ ಹಣವನ್ನು ಬಿಸಿಯೂಟ ಕಾರ್ಮಿಕರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗೆ ಕನಿಷ್ಠ ವೇತನ ನೀಡಲಾಗುತ್ತಿದೆ. ಅದರಂತೆ ಅಕ್ಷರ ದಾಸೋಹ ಸಿಬ್ಬಂದಿಗೂ ಕನಿಷ್ಠ ವೇತನ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಮಿತಿ ಅಧ್ಯಕ್ಷೆ ಎ.ಶಾಂತಾ, ರಾಜ್ಯ ಕಾರ್ಯದರ್ಶಿ ಪಿ.ಎಸ್.ಸಂಧ್ಯಾ ಮತ್ತು ಇತರ ಮುಖಂಡರು ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದರು.

Read More
Next Story