
ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನುವಾದಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ದೇಶಕ್ಕೆ ಎಂಥಹ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ನಡೆ ಚರ್ಚೆಗೆ ಗ್ರಾಸವಾಗಿದೆ.
ಜಾತ್ಯಾತೀತ ಮೌಲ್ಯಗಳನ್ನು ಪ್ರತಿಪಾದಿಸುವ ಪ್ರಾದೇಶಿಕ ಪಕ್ಷದ ಪ್ರತಿನಿಧಿಯಾಗಿ ಕುಮಾರಸ್ವಾಮಿ ಅವರ ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಖ್ಯ ಬೆಳೆಸಿದ ಮೇಲೆ ಜಾತ್ಯಾತೀತ ಜನತಾದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮನುವಾದಿಯಾಗಿ ಬದಲಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಟೀಕಿಸಿದ್ದಾರೆ.
ಜಾತ್ಯಾತೀತ ಮೌಲ್ಯಗಳಲ್ಲಿ ನಂಬಿಕೆ ಇರಿಸಿಕೊಂಡಿರುವ ಪ್ರಗತಿಪರರು, ಚಿಂತಕರು ಕೂಡ ಕುಮಾರಸ್ವಾಮಿ ಅವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕುರಿತು ಕುಮಾರಸ್ವಾಮಿ ನೀಡಿದ್ದ ಹೇಳಿಕೆಗಳನ್ನು ಮುಂದಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಟೀಕೆ ಆರಂಭಿಸಿದ್ದಾರೆ. 2022ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಅಂದಿನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧಿಸುವ ಪ್ರಸ್ತಾಪ ಮಾಡಿದ್ದರು. ಆಗ ಇದೇ ಕುಮಾರಸ್ವಾಮಿ ಅವರು, "ಶಾಲೆಯಲ್ಲಿ ಭಗವದ್ಗೀತೆ ಕಲಿಸಿದರೆ ಮಕ್ಕಳ ಹೊಟ್ಟೆ ತುಂಬುತ್ತದೆಯೇ?" ಎಂದು ಪ್ರಶ್ನಿಸಿರುವ ವಿಡಿಯೊವನ್ನು ಟ್ರೋಲ್ ಮಾಡುತ್ತಿದ್ದಾರೆ.
ಎನ್‌ಡಿಎ ಮೈತ್ರಿಕೂಟದ ಭಾಗವಾದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜಾತ್ಯಾತೀತ ನಿಲುವು ಬದಲಾಗಿದೆ. ಅಂದಿನ ವಿಡಿಯೊ ಹಾಗೂ ಈಗಿನ ಹೇಳಿಕೆಗಳನ್ನು ಹಂಚಿಕೊಂಡು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ.
ಎಚ್‌ಡಿಕೆ ಈಗ ಮನುವಾದಿ
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಶನಿವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧ ಆಕ್ರೋಶ ನುಡಿಗಳನ್ನಾಡಿದರು.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಎಚ್.ಡಿ. ಕುಮಾರಸ್ವಾಮಿ ಅವರು ಮನುವಾದಿಯಾಗಿ ಬದಲಾಗಿದ್ದಾರೆ. ಜಾತ್ಯಾತೀತ ಮೌಲ್ಯಗಳನ್ನು ಕಡೆಗಣಿಸಿದ್ದಾರೆ ಎಂದು ಟೀಕಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶ ಕಂಡ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರು. ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾನ್ ಚೇತನ ಎಂದು ಬಣ್ಣಿಸಿದರು.
ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಶಾಲಾ ಕಾಲೇಜು ಮಕ್ಕಳಿಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆ ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದು ಹೇಳಿದರು.
ಸಾಮಾಜಿಕ ವ್ಯವಸ್ಥೆಗೆ ರೋಸಿದ್ದ ಅಂಬೇಡ್ಕರ್
ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊನೆಯ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಭಗವದ್ಗೀತೆ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?
ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯ. ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶ ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆ ಹೊಂದಿವೆ ಎಂದು ಸಚಿವ ಕುಮಾರಸ್ವಾಮಿ ಪ್ರತಿಪಾದಿಸಿದ್ದರು.
ಇತ್ತೀಚೆಗೆ ಪ್ರಧಾನಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು. ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮ, ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶ ನೀಡಿತು ಎಂದು ಕುಮಾರಸ್ವಾಮಿ ಹೇಳಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶ ಬಲಪಡಿಸುತ್ತದೆ. ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತದ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಕೋರಿದ್ದರು.

