ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ
x

ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ


ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ(58) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದರು. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದ್ದರು. ನಂತರ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ಕೂಡ ಅವರು ನಟಿಸಿದ್ದರು.

1984ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ, ಅಂಬರೀಶ್ ನಟನೆಯ ಮಸಣದ ಹೂವು ಸಿನಿಮಾದ ಮೂಲಕ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

Read More
Next Story