
ಅರಣ್ಯ ಇಲಾಖೆಗೆ ಅನಿಲ್ ಕುಂಬ್ಳೆ ʼಉಚಿತʼ ರಾಯಭಾರಿ; ಚರ್ಚೆಗೆ ಗ್ರಾಸವಾದ ತಮನ್ನಾ ಸಂಭಾವನೆ
ವಿಶೇಷ ಎಂದರೆ, ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನೇಮಕಗೊಂಡ ತಮನ್ನಾ ಅವರು ಎರಡು ವರ್ಷಕ್ಕೆ ರೂ. 6.2 ಕೋಟಿ ಸಂಭಾವನೆಯನ್ನು ಸರ್ಕಾರ ಘೋಷಿಸಿತ್ತು. ಅದರೆ, ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.
ಕನ್ನಡೇತರ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜಂಟ್ಸ್ (ಮೈಸೂರು ಸ್ಯಾಂಡಲ್ ಸೋಪ್) ರಾಯಭಾರಿಯಾಗಿ ನೇಮಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ರಾಜ್ಯ ಸರ್ಕಾರ, ಈಗ ಖ್ಯಾತ ಕ್ರಿಕೆಟರ್, ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಇಲಾಖೆಗೆ ರಾಯಭಾರಿಯಾಗಿ ನೇಮಿಸಿ ತೇಪೆ ಹಚ್ಚುವ ಕೆಲಸ ಮಾಡಿದೆ.
ವಿಶೇಷ ಎಂದರೆ, ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನೇಮಕಗೊಂಡ ತಮನ್ನಾ ಅವರು ಎರಡು ವರ್ಷಕ್ಕೆ ರೂ. 6.2 ಕೋಟಿ ಸಂಭಾವನೆಯನ್ನು ಸರ್ಕಾರ ಘೋಷಿಸಿತ್ತು. ಅದರೆ, ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇದು ತಮನ್ನಾ ಮತ್ತು ಅನಿಲ್ ಕುಂಬ್ಳೆ ಅವರ ನೇಮಕ ಮತ್ತು ಸಂಭಾವನೆ ಬಗ್ಗೆ ವಿವಿಧ ಸ್ತರಗಳಿಂದ ಚರ್ಚೆಗೆ ಕಾರಣವಾಗಿದೆ.
ಅಂತಾರಾಷ್ಟ್ರೀಯ ಖ್ಯಾತಿಯ ಖ್ಯಾತ ಲೆಗ್ ಸ್ಪಿನ್ನರ್ ಕುಂಬ್ಳೆ ಅವರನ್ನು ಅರಣ್ಯ ಇಲಾಖೆ ರಾಯಭಾರಿಯಾಗಿ ನೇಮಿಸಿ ತೀರ್ಮಾನ ಕೈಗೊಂಡಿರುವುದಾಗಿ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಪ್ರಕಟಿಸಿದ್ದಾರೆ.
"ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ತಿಳಿಸಿದ್ದಾರೆ.
ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.