ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ಕಡಿವಾಣ;  570 ಆರೋಪಿಗಳ ಬಂಧನ- ಕೆ.ಎಚ್‌.ಮುನಿಯಪ್ಪ
x

ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ಕಡಿವಾಣ; 570 ಆರೋಪಿಗಳ ಬಂಧನ- ಕೆ.ಎಚ್‌.ಮುನಿಯಪ್ಪ

'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದಂಧೆಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ. ಈವರೆಗೆ ಬರೋಬ್ಬರಿ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.


Click the Play button to hear this message in audio format

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದಂಧೆಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಈವರೆಗೆ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಸಿ.ಟಿ. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಡಿತರ ಅಕ್ಕಿ ಸೋರಿಕೆಯನ್ನು ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕಠಿಣ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಪಾಲಿಶ್ ಮಾಡಿ ಮತ್ತೆ ಮಾರುಕಟ್ಟೆಗೆ ಬಿಡುವ ಅಥವಾ ನೆರೆ ರಾಜ್ಯಗಳಿಗೆ ಸಾಗಿಸುವ ಜಾಲದ ವಿರುದ್ಧ ಇಲಾಖೆ ಸಮರ ಸಾರಿದೆ. ರಾಜ್ಯಾದ್ಯಂತ ನಡೆದ ದಾಳಿಗಳಲ್ಲಿ ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಕಿ ಅಕ್ರಮ ಸಾಗಾಟಕ್ಕೆ ಬಳಸಲಾಗಿದ್ದ 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಅಧಿಕಾರಿಗಳ ಮೇಲೂ ಶಿಸ್ತು ಕ್ರಮ

ಅಕ್ರಮದಲ್ಲಿ ಕೇವಲ ಮಧ್ಯವರ್ತಿಗಳಷ್ಟೇ ಅಲ್ಲದೆ, ಅಧಿಕಾರಿಗಳ ನಿರ್ಲಕ್ಷ್ಯವೂ ಕಂಡುಬಂದಿದೆ. ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಕ್ರಮ ದಾಸ್ತಾನುದಾರರಿಗೆ ಮಾತ್ರವಲ್ಲದೆ, ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಳ್ಳುವ ಕಾರ್ಡ್‌ದಾರರಿಗೂ ಸಚಿವರು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಪಡಿತರ ಚೀಟಿದಾರರು ತಮಗೆ ಮಂಜೂರಾದ ಅಕ್ಕಿಯನ್ನು ಮಾರಾಟ ಮಾಡುವುದು ಕಂಡುಬಂದರೆ, ಅಂತಹವರ ಪಡಿತರ ಚೀಟಿಯನ್ನು ಕೂಡಲೇ ರದ್ದುಪಡಿಸಲಾಗುವುದು. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.

ಅಕ್ಕಿ ಸೋರಿಕೆ ತಡೆಗಟ್ಟಲು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ವಿಶೇಷ ಜಾಗೃತಿ ಸಮಿತಿಗಳನ್ನು ರಚಿಸಲಾಗಿದೆ. ಅಲ್ಲದೆ, ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ 'ಆಹಾರ ಅದಾಲತ್'ಗಳನ್ನು ನಡೆಸುವ ಮೂಲಕ ಪಡಿತರ ವಿತರಣೆಯಲ್ಲಿನ ಲೋಪಗಳನ್ನು ಸರಿಪಡಿಸಲಾಗುತ್ತಿದೆ ಹಾಗೂ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ರಚಿಸಲಾಗಿರುವ 'ಆಹಾರ ಜಾಗೃತ ದಳ'ವು ನಿರಂತರವಾಗಿ ಅನಿರೀಕ್ಷಿತ ದಾಳಿಗಳನ್ನು ನಡೆಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Read More
Next Story