ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ತನ್ನ ಹೇಳಿಕೆಯಿಂದ ಮುಜುಗರಕ್ಕೀಡಾದ ಬಿಜೆಪಿ
x

ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ತನ್ನ ಹೇಳಿಕೆಯಿಂದ ಮುಜುಗರಕ್ಕೀಡಾದ ಬಿಜೆಪಿ

ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದ ಬಳಿಕ ಬಿಜೆಪಿ ಪೋಸ್ಟ್‌ನ್ನು ಅಳಿಸಿ ಹಾಕಿದೆ. ಇದು ಬಿಜೆಪಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್​ ​ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಹಿಂ ವ್ಯಕ್ತಿಯನ್ನು ನೇಮಿಸಿದೆ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿಯು ವಾಗ್ದಾಳಿ ನಡೆಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿತ್ತು. ಆದರೆ ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದ ಬಳಿಕ ಬಿಜೆಪಿ ಪೋಸ್ಟ್‌ನ್ನು ಅಳಿಸಿ ಹಾಕಿದೆ. ಇದು ಬಿಜೆಪಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.

ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ತಹಶಿಲ್ದಾರ್ 12 ಜನ ಸದಸ್ಯರನ್ನು ನೇಮಕ ಮಾಡಿದ್ದಾರೆ. ಈ 12 ಜನರಲ್ಲಿ ನವಾಜ್​ ಎಂಬ ಓರ್ವ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

ಬಳೀಕ ಸಮಿತಿ ರಚನೆ ಬಗ್ಗೆ ಸ್ಪಷ್ಟನೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದು, ʻʻಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು?ʼʼ ಎಂದು ಪ್ರಶ್ನೆ ಮಾಡಿದ್ದರು.

ʻʻಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತುʼʼ ಎನ್ನುವುದುನ್ನು ದಾಖಲೆ ಸಮೇತ ಪೋಸ್ಟ್‌ ಮಾಡಿದ್ದಾರೆ.

ʻʻಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆʼʼ ಎಂದಿದ್ದಾರೆ.

ʻʻರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆʼʼ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ಅಳಿಸಿದ ಬಿಜೆಪಿ

ಆ ಬಳಿಕ ಬಿಜೆಪಿ ರಾಜ್ಯ ಘಟಕ ತನ್ನ ಎಕ್ಸ್‌ನಲ್ಲಿನ ಪೋಸ್ಟ್‌ನ್ನು ಅಳಿಸಿಹಾಕಿದೆ. ಈ ವಿಚಾರವಾಗಿ ಮತ್ತೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತರಾಟೆ ತೆಗೆದುಕೊಂಡಿದ್ದಾರೆ. ʻʻತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿ ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆʼʼ ಎಂದಿದ್ದಾರೆ.

ʻʻಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು. ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ. ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲʼʼ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ಮಂತ್ರಿ ರಾಮಲಿಂಗಾ ರೆಡ್ಡಿ ಅವರೂ ಈ ಬಗ್ಗೆ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಿಕೆ ನೀಡಿ , "ಅನ್ಯ ಧರ್ಮೀಯರ ಬಗ್ಗೆ ದ್ವೇಷವನ್ನು ಬಿತ್ತಿ ಅವರ ವಿರುದ್ಧ ಹಿಂದೂ ಸಮುದಾಯವನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಬೇಳೆ ಬೇಯಿಸಲು ರಣಹದ್ದುಗಳಂತೆ ಸದಾ ಹಪಹಪಿಸುವ ಬಿಜೆಪಿಗರು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ," ಎಂದು ಟೀಕಿಸಿದ್ದಾರೆ.

Read More
Next Story