
ಬಳ್ಳಾರಿಯಲ್ಲಿ ಬ್ಯಾನರ್ ಸಂಘರ್ಷ: ಜನಾರ್ದನ ರೆಡ್ಡಿ ನಿವಾಸದ ಎದುರೇ ಲಾಠಿ ಪ್ರಹಾರ, ಗಾಳಿಯಲ್ಲಿ ಗುಂಡು
ಜನಾರ್ಧನ ರೆಡ್ಡಿ ಮನೆಯ ಮುಂಭಾಗ ಬ್ಯಾನರ್ ಹಾಕದಂತೆ ಅಲ್ಲಿನ ಸಿಬ್ಬಂದಿ ಮತ್ತು ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.
ಬಳ್ಳಾರಿಯಲ್ಲಿ ಇದೇ ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರವು ಗುರುವಾರ ರಾತ್ರಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದ ಅವಂಬಾವಿ ಪ್ರದೇಶ ರಣರಂಗವಾಗಿ ಮಾರ್ಪಟ್ಟಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಎದುರೇ ಎರಡು ಗುಂಪುಗಳ ನಡುವೆ ಭಾರಿ ಹೈಡ್ರಾಮಾ ನಡೆದಿದ್ದು, ಕಲ್ಲು ತೂರಾಟ ಹಾಗೂ ನೂಕಾಟ-ತಳ್ಳಾಟ ನಡೆದಿದೆ ಎಂದು ವರದಿಯಾಗಿದೆ. ಇದೇ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಸಂಗವೂ ನಡೆದಿದೆ ಎಂದು ಹೇಳಲಾಗಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಘಟನೆಯಲ್ಲಿ ಎರಡೂ ಕಡೆಯ ಬೆಂಬಲಿಗರು ಗಾಯಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಉದ್ವಿಗ್ನ ವಾತಾವರಣವಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜನವರಿ 3ರಂದು ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ನಗರದಾದ್ಯಂತ ಶುಭಾಶಯ ಕೋರುವ ಬ್ಯಾನರ್‌ಗಳನ್ನು ಅಳವಡಿಸುತ್ತಿದ್ದರು. ಗುರುವಾರ ರಾತ್ರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ಅವರ ಬೆಂಬಲಿಗರು, ಅವಂಬಾವಿ ಪ್ರದೇಶದಲ್ಲಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾದಾಗ ಗಲಾಟೆ ಆರಂಭವಾಗಿದೆ.
ರೆಡ್ಡಿ ಮನೆಯ ಮುಂಭಾಗ ಬ್ಯಾನರ್ ಹಾಕದಂತೆ ಅಲ್ಲಿನ ಸಿಬ್ಬಂದಿ ಮತ್ತು ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.
ಸ್ಥಳಕ್ಕೆ ಧಾವಿಸಿದ ಶ್ರೀರಾಮುಲು, ಸತೀಶ್ ರೆಡ್ಡಿ
ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಜನಾರ್ದನ ರೆಡ್ಡಿ ನಿವಾಸಕ್ಕೆ ದೌಡಾಯಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಕೂಡ ತಮ್ಮ ಬೆಂಬಲಿಗರ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿದ್ದಾರೆ.
ಎರಡೂ ಕಡೆಯ ಪ್ರಮುಖ ನಾಯಕರು ಮತ್ತು ನೂರಾರು ಬೆಂಬಲಿಗರು ಒಮ್ಮೆಲೆ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರಿದೆ. ಎರಡೂ ಗುಂಪುಗಳ ನಡುವೆ ತೀವ್ರ ನೂಕಾಟ ಮತ್ತು ತಳ್ಳಾಟ ನಡೆದಿದ್ದು, ಬಳಿಕ ಏಕಾಏಕಿ ಕಲ್ಲು ತೂರಾಟ ಆರಂಭವಾಗಿದೆ.
ಪೊಲೀಸರ ಮೇಲೆಯೇ ಕಲ್ಲು ತೂರಾಟ
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಲು ಯತ್ನಿಸಿದರು. ಆದರೆ, ಉದ್ರಿಕ್ತ ಗುಂಪು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಅಂತಿಮವಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಬೇಕಾಯಿತು. ವಾತಾವರಣ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡ ಸತೀಶ್ ರೆಡ್ಡಿ ಅವರ ಬೆಂಬಲಿಗರಿಗೆ ಗಾಯಗಳಾಗಿವೆ. ಇತ್ತ ಜನಾರ್ದನ ರೆಡ್ಡಿ ಅವರ ಓರ್ವ ಬೆಂಬಲಿಗನಿಗೂ ಗಾಯವಾಗಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

