
ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಜೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿತ್ತು
ಬೈಲಹೊಂಗಲ| ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಕ್ಕೆ ಇಬ್ಬರು ಬಲಿ
ಕಳೆದ ಎರಡು ವರ್ಷಗಳಿಂದ ಹಲವಾರು ಕಾರ್ಖಾನೆಗಳಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದು ಕಾರ್ಮಿಕರ ಸುರಕ್ಷತೆಯ ಬಗ್ಗೆ ಮತ್ತಷ್ಟು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಕ್ಕರೆ ಕಾರ್ಖನೆಯಲ್ಲಿ ಬಾಯ್ಲರ್ ಸ್ಫೋಟಿಸಿದ ಪರಿಣಾಮ ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಬುಧವಾರ (ಜ.7) ನಡೆದಿದೆ.
ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಯ್ಲರ್ ಸ್ಫೋಟದ ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಹಾಗೂ ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕ್ರಮಕ್ಕೆ ಆಗ್ರಹ
ಬಾಯ್ಲರ್ ಸ್ಫೋಟಗೊಂಡಿರುವುದಕ್ಕೆ ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳು ಸರಿಯಾಗಿ ಪಾಲಿಸುತ್ತಿರಲಿಲ್ಲ. ಕಾರ್ಮಿಕರ ಪ್ರಾಣಾಪಾಯಕ್ಕೆ ಕಾರಣವಾಗಿರುವ ನಿರ್ಲಕ್ಷ್ಯದ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸುರಕ್ಷತಾ ಪಾಲನಾ ವರದಿಗೆ ಸೂಚನೆ
ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ನೀಡಿದೆ. ಗಾಯಗೊಂಡ ಕಾರ್ಮಿಕರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವೆಚ್ಚವನ್ನು ಕಾರ್ಖಾನೆಯೇ ಭರಿಸಲಿದೆ. ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಯ್ಲರ್‌ನ ತಾಂತ್ರಿಕ ಸ್ಥಿತಿ, ನಿರ್ವಹಣಾ ದಾಖಲೆಗಳು ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆಯ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಕಾರ್ಖನೆ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಬಾಯ್ಲರ್ ಸ್ಫೋಟಗಳು
ಕಳೆದ ಎರಡು ವರ್ಷಗಳಿಂದ ಹಲವಾರು ಬಾಯ್ಲರ್ ಸ್ಫೋಟ ಸಂಭವಿಸಿದರೂ ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿರುವುದು ಮತ್ತಷ್ಟು ಪ್ರಕಣಗಳು ಹೆಚ್ಚಾಗುವಂತೆ ಮಾಡಿದೆ, 2025ರ ಜನವರಿಯಲ್ಲಿ ತುಮಕೂರು ನಗರದ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಪರಿಮಳ ಆಗ್ರೋ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಬಿಡದಿ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.
2024 ಡಿಸೆಂಬರ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗಣೇಶ್ ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡು ಒಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದರು. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳು ಕಂಪಿಸಿದ್ದವು. ಅದೇ ವರ್ಷ ಜುಲೈನಲ್ಲಿ ವಿಜಯಪುರದ ಬಬಲೇಶ್ವರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿತ್ತು. ಅದೃಷ್ಟವಶಾತ್ ಕಾರ್ಮಿಕರು ಉಪಹಾರಕ್ಕೆ ತೆರಳಿದ್ದರಿಂದ ಪ್ರಾಣಾಪಾಯ ತಪ್ಪಿತ್ತು. ಫೆಬ್ರವರಿಯಲ್ಲಿ ರಾಮನಗರದ ಟಿಪ್ಪು ನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 62 ವರ್ಷದ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು.

