
ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಜೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿತ್ತು
ಬೆಳಗಾವಿ| ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ; ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಬೆಳಗಾವಿಯಲ್ಲಿ ಸಂಭವಿಸಿದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಕಾರ್ಖಾನೆಯಲ್ಲಿ ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖನೆಯಲ್ಲಿ ಬುಧವಾರ ಸಂಜೆ ಬಾಯ್ಲರ್ ಸ್ಫೋಟಗೊಂಡಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಒಂದೇ ದಿನ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್ ಮೃತ ದುರ್ದೈವಿಗಳು.
ಬಾಯ್ಲರ್ ಸ್ಫೋಟದ ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಹಾಗೂ ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಬಾಯ್ಲರ್ ಸ್ಫೋಟಗೊಂಡಿರುವುದಕ್ಕೆ ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳು ಸರಿಯಾಗಿ ಪಾಲಿಸುತ್ತಿರಲಿಲ್ಲ. ಕಾರ್ಮಿಕರ ಪ್ರಾಣಾಪಾಯಕ್ಕೆ ಕಾರಣವಾಗಿರುವ ನಿರ್ಲಕ್ಷ್ಯದ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸುರಕ್ಷತಾ ಪಾಲನಾ ವರದಿಗೆ ಸೂಚನೆ
ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ನೀಡಿದೆ. ಗಾಯಗೊಂಡ ಕಾರ್ಮಿಕರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವೆಚ್ಚವನ್ನು ಕಾರ್ಖಾನೆಯೇ ಭರಿಸಲಿದೆ. ಕೈಗಾರಿಕಾ ಸುರಕ್ಷತಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಯ್ಲರ್‌ನ ತಾಂತ್ರಿಕ ಸ್ಥಿತಿ, ನಿರ್ವಹಣಾ ದಾಖಲೆಗಳು ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆಯ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಕಾರ್ಖನೆ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

