ಬೆಂಗಳೂರಿಗೆ ಬರಲಿವೆ 56 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಟ್ರಾಫಿಕ್ ಸಿಗ್ನಲ್​​ಗಳು
x

ಬೆಂಗಳೂರಿಗೆ ಬರಲಿವೆ 56 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಟ್ರಾಫಿಕ್ ಸಿಗ್ನಲ್​​ಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ, ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿ 56.45 ಕೋಟಿ ರೂಪಾಯಿ ವೆಚ್ಚದಲ್ಲಿ 110 ಆಯ್ದ ಜಂಕ್ಷನ್‌ಗಳಲ್ಲಿ ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲು ಸಂಪುಟ ಅನುಮೋದನೆ ನೀಡಿದೆ.


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಮೂರ್ತಿ ಕೇಶವನಾರಾಯಣ ಆಯೋಗದ ಇಲಾಖಾ ತನಿಖೆಯ ಶಿಫಾರಸನ್ನು ತಿರಸ್ಕರಿಸಲಾಗಿದೆ. ಅಲ್ಲದೆ, ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 110 ಜಂಕ್ಷನ್‌ಗಳಲ್ಲಿ ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲು ಒಪ್ಪಿಗೆ ನೀಡಲಾಗಿದೆ.

ಬಾಗಲಕೋಟೆಯಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ ಸೇರಿದಂತೆ ಅನೇಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಭೆಯ ಬಳಿಕ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸಂಪುಟದ ನಿರ್ಣಯಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣವ್ ಮೊಹಾಂತಿ ಅವರ ಪಾತ್ರವಿಲ್ಲ ಎಂದು ನ್ಯಾಯಮೂರ್ತಿ ಕೇಶವನಾರಾಯಣ ಆಯೋಗವು ಸ್ಪಷ್ಟಪಡಿಸಿತ್ತು. ಆದರೆ, ತನಿಖಾ ಕ್ರಮದಲ್ಲಿನ ಲೋಪಗಳಿಗಾಗಿ ಕೆಲವು ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿತ್ತು. ಈ ಪ್ರಕರಣವನ್ನು ಈಗಾಗಲೇ ಸಿಬಿಐ ತನಿಖೆ ನಡೆಸಿ, ನ್ಯಾಯಾಲಯಗಳು ಕ್ಲೀನ್ ಚಿಟ್ ನೀಡಿರುವುದರಿಂದ, ಪ್ರತ್ಯೇಕ ಇಲಾಖಾ ತನಿಖೆಯ ಅಗತ್ಯವಿಲ್ಲ ಎಂಬ ನಿವೃತ್ತ ಡಿಜಿಪಿ ಎಂ.ಕೆ. ಶ್ರೀವಾಸ್ತವ್ ಅವರ ಅಧ್ಯಯನ ವರದಿಯನ್ನು ಆಧರಿಸಿ, ಸಂಪುಟವು ಆಯೋಗದ ಶಿಫಾರಸನ್ನು ತಿರಸ್ಕರಿಸಿದೆ.

ನಗರದ ಸಂಚಾರ ದಟ್ಟಣೆಗೆ ಪರಿಹಾರ

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ, ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿ 56.45 ಕೋಟಿ ರೂಪಾಯಿ ವೆಚ್ಚದಲ್ಲಿ 110 ಆಯ್ದ ಜಂಕ್ಷನ್‌ಗಳಲ್ಲಿ ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲು ಸಂಪುಟ ಅನುಮೋದನೆ ನೀಡಿದೆ. ಜೊತೆಗೆ, ಚನ್ನಪಟ್ಟಣ ನಗರಕ್ಕೆ ಎರಡನೇ ಹಂತದ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 128.74 ಕೋಟಿ ರೂಪಾಯಿಗಳ ಪರಿಷ್ಕೃತ ಯೋಜನೆಗೆ ಮತ್ತು ಬೆಂಗಳೂರಿನ ವಿವಿಧ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ವಹಣೆಗೆ ಒಟ್ಟು 102.43 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಡಿ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶದ (UUCMS) ಎರಡನೇ ಆವೃತ್ತಿಯನ್ನು 40.29 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಬಾಗಲಕೋಟೆಯಲ್ಲಿ 150 ಎಂಬಿಬಿಎಸ್ ಸೀಟುಗಳ ಸಾಮರ್ಥ್ಯದ ನೂತನ ವೈದ್ಯಕೀಯ ಕಾಲೇಜು ಸ್ಥಾಪಿಸಲು 450 ಕೋಟಿ ರೂಪಾಯಿಗಳ ಯೋಜನೆಗೆ ಸಂಪುಟ ಅಸ್ತು ಎಂದಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕರ್ತವ್ಯಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ನೀಡಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಆಸ್ಪತ್ರೆಯನ್ನು 95.60 ಕೋಟಿ ರೂಪಾಯಿ ವೆಚ್ಚದಲ್ಲಿ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಮತ್ತು ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ.

Read More
Next Story