ಮಹಿಳೆ ಮೇಲಿನ ಕೋಪಕ್ಕೆ ಆಕೆಯ 6 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ!
x

ಮಹಿಳೆ ಮೇಲಿನ ಕೋಪಕ್ಕೆ ಆಕೆಯ 6 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ!

ದೂರು ದಾಖಲಾದ 12 ಗಂಟೆಗಳೊಳಗೆ ರಸ್ತೆ ಬದಿಯ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.


ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಇತ್ತೀಚೆಗೆ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲು ಮಗುವಿನ ತಾಯಿಯ ಮೇಲಿದ್ದ ದ್ವೇಷವೇ ಕಾರಣ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.

ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಯೂಸಫ್‌ ಮೀರ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ ನಂತರ ತಾನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿಯು ವೈಟ್‌ಫೀಲ್ಡ್‌ನಲ್ಲಿ ವಾಸಿಸುತ್ತಿದ್ದು ಬಾಲಕಿಯ ತಾಯಿಗೆ ಪರಿಚಿತನಾಗಿದ್ದ. ಕ್ಷುಲ್ಲಕ ವಿಚಾರಗಳಿಗೆ ಆಗಾಗ್ಗೆ ಜಗಳ ಮಾಡುತ್ತಿದ್ದ. ಇದೇ ದ್ವೇಷದ ಹಿನ್ನೆಲೆಯಲ್ಲಿ ಆರು ವರ್ಷದ ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಮೇಲೆ ಪ್ಲಾಸ್ಟಿಕ್ ವೈರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಆರೋಪಿ

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿಯ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ನಾಪತ್ತೆಯಾದ ಒಂದು ದಿನದ ನಂತರ ಪೋಷಕರು ವೈಟ್‌ಫೀಲ್ಡ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಾದ 12 ಗಂಟೆಗಳೊಳಗೆ ರಸ್ತೆ ಬದಿಯ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತಂದಿದ್ದಾರೆ.

ಆರೋಪಿ ಯುಸೂಫ್ ಮೀರ್ ವಿರುದ್ಧ ಈಗಾಗಲೇ ಎರಡು ಗಂಭೀರ ಪ್ರಕರಣಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ ಒಂದು ಪೋಕ್ಸೋ ಪ್ರಕರಣ ಹಾಗೂ ಮತ್ತೊಂದು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಹಲವು ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

Read More
Next Story