Woman arrested for saying Jai Bangla instead of Bharat Mata ki Jai!
x

ಬಂಧಿತ ಮಹಿಳೆ ಸರ್ಬಾನು ಖಾತುನ್

ರಾಜ್ಯ ರಾಜಧಾನಿಯಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಮಹಿಳೆ ಅರೆಸ್ಟ್!

ಹುಲಿಮಂಗಲದ ಪೋಡು ಬಳಿಯ ಶೇಡ್ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.


Click the Play button to hear this message in audio format

ಉದ್ಯಾನ ನಗರಿ ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಬಂಧಿಸಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಮಹಿಳೆಯನ್ನು ಸರ್ಬಾನು ಖಾತುನ್(25) ಎಂದು ಗುರುತಿಸಲಾಗಿದೆ. ಆಕೆಯ ವಿರುದ್ಧ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಡಿ ಸೋಮವಾರ(ಜ.12) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ಗಂಭೀರವಾಗಿ ಪರಿಗಣಿಸಲಾಗಿದೆ. ಘಟನೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ. ವಿಡಿಯೋ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಮಹಿಳೆಯ ಹಿನ್ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಘಟನೆ ?

ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿಮಂಗಲದ ಪೋಡು ಬಳಿಯ ಶೇಡ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ವಲಸಿಗರ ವಿಚಾರವಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮೂರು ದಿನಗಳ ಹಿಂದೆ, ಕೆಲವು ಹಿಂದೂ ಕಾರ್ಯಕರ್ತರು ಈ ಶೇಡ್‌ಗಳ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು.

ಮಹಿಳೆ ಹೇಳಿಕೆ ವೈರಲ್!

ಅಕ್ರಮ ಬಾಂಗ್ಲಾ ವಲಸಿಗರು ವಾಸವಿದ್ದ ಶೇಡ್‌ಗಳ ಪಕ್ಕದ ಮತ್ತೊಂದು ಶೇಡ್‌ನಲ್ಲಿ ಬಂಧಿತ ಮಹಿಳೆ ವಾಸವಿದ್ದವರು. ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಶೇಡ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ, ಆರೋಪಿ ಮಹಿಳೆ ಸರ್ಬಾನು ಖಾತುನ್ ಅಲ್ಲಿಂದ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲವು ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದು, ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ತಾತ್ಕಾಲಿಕ ಭದ್ರತೆ ಹೆಚ್ಚಳ

ಈ ಘಟನೆಯಿಂದಾಗಿ ಹುಲಿಮಂಗಲದ ಪೋಡು ಬಳಿಯ ಶೇಡ್ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮತ್ತು ಚರ್ಚೆಗಳು ನಡೆಯುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆ ಕುರಿತಂತೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಪೊಲೀಸರು ಸಾರ್ವಜನಿಕರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದು, ಯಾವುದೇ ಪ್ರಚೋದನಕಾರಿ ಘೋಷಣೆಗಳು ಅಥವಾ ಕಾನೂನು ಕೈಗೆತ್ತಿಕೊಳ್ಳುವ ಪ್ರಯತ್ನಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More
Next Story