Bengaluru’s Second International Airport: KSIIDC Invites Tenders for Feasibility Report
x

ಸಾಂದರ್ಭಿಕ ಚಿತ್ರ

ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ರಾಜ್ಯ ಸರ್ಕಾರ ಈಗಾಗಲೇ ಮೂರು ಪ್ರಮುಖ ಸ್ಥಳಗಳನ್ನು ಗುರುತಿಸಿದೆ. ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ತುಮಕೂರು ರಸ್ತೆಯ ನೆಲಮಂಗಲದ ಬಳಿ ಇರುವ ಜಾಗಗಳು ಇದರಲ್ಲಿ ಸೇರಿವೆ.


Click the Play button to hear this message in audio format

ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮಹತ್ವದ ಚಾಲನೆ ನೀಡಿದೆ. ಈ ಸಂಬಂಧ ಗುರುತಿಸಲಾದ ಸ್ಥಳಗಳ ಅನುಕೂಲತೆ ಹಾಗೂ ಯೋಜನೆಯ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯೊಂದನ್ನು ಆಯ್ಕೆ ಮಾಡಲು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (KSIIDC) ಟೆಂಡರ್ ಆಹ್ವಾನಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಶನಿವಾರ ಅಧಿಕೃತವಾಗಿ ತಿಳಿಸಿದ್ದಾರೆ. ಅರ್ಹ ಮತ್ತು ಆಸಕ್ತ ಸಂಸ್ಥೆಗಳು ಟೆಂಡರ್ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನಾಂಕವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ರಾಜ್ಯ ಸರ್ಕಾರ ಈಗಾಗಲೇ ಮೂರು ಪ್ರಮುಖ ಸ್ಥಳಗಳನ್ನು ಗುರುತಿಸಿದೆ. ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ತುಮಕೂರು ರಸ್ತೆಯ ನೆಲಮಂಗಲದ ಬಳಿ ಇರುವ ಜಾಗಗಳು ಇದರಲ್ಲಿ ಸೇರಿವೆ. ಈ ಹಿಂದೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ಉನ್ನತ ಮಟ್ಟದ ತಜ್ಞರ ತಂಡವು ಈ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಇದೀಗ ಟೆಂಡರ್ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಸಲಹಾ ಸಂಸ್ಥೆಯು ಮುಂದಿನ 5 ತಿಂಗಳ ಕಾಲಾವಕಾಶದೊಳಗೆ ಸಮಗ್ರವಾದ ತಾಂತ್ರಿಕ ಮತ್ತು ಆರ್ಥಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಪ್ರತಿಷ್ಠಿತ ಸಂಸ್ಥೆಗಳಿಂದ ಟೆಂಡರ್​

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕೆಲವು ನಿರ್ದಿಷ್ಟ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ ಕನಿಷ್ಠ 250 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳನ್ನು ನಿರ್ವಹಿಸಿರುವ ಮತ್ತು ಇದೇ ಕ್ಷೇತ್ರದಲ್ಲಿ ಕನಿಷ್ಠ ಐದು ಯೋಜನೆಗಳಿಗೆ ಸಲಹಾ ವರದಿ ನೀಡಿರುವ ಅನುಭವ ಹೊಂದಿರುವ ಪ್ರತಿಷ್ಠಿತ ಸಂಸ್ಥೆಗಳು ಮಾತ್ರ ಈ ಟೆಂಡರ್‌ನಲ್ಲಿ ಭಾಗವಹಿಸಲು ಅರ್ಹವಾಗಿರುತ್ತವೆ. ಆಯ್ಕೆಯಾಗುವ ಸಂಸ್ಥೆಯು ಗುರುತಿಸಲಾದ ಮೂರೂ ಸ್ಥಳಗಳಲ್ಲಿ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ ವ್ಯವಸ್ಥೆ ಮತ್ತು ತ್ಯಾಜ್ಯ ನಿರ್ವಹಣೆಯಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಆಳವಾದ ಅಧ್ಯಯನ ನಡೆಸಬೇಕಾಗುತ್ತದೆ.

ಅಲ್ಲದೆ, ಈ ಯೋಜನೆಯಿಂದ ಸುತ್ತಮುತ್ತಲಿನ ಜನಸಂಖ್ಯೆ, ಪ್ರದೇಶದ ಅಭಿವೃದ್ಧಿ, ಶಬ್ದ ಮಾಲಿನ್ಯ ಮತ್ತು ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಸಂಸ್ಥೆಯು ವರದಿ ನೀಡಬೇಕಿದೆ. ಉದ್ದೇಶಿತ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ತಗುಲುವ ಅಂದಾಜು ವೆಚ್ಚ, ಅಗತ್ಯವಿರುವ ಭೂಮಿಯ ವಿಸ್ತೀರ್ಣ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಸೇರಿದಂತೆ ವಿವಿಧ ಇಲಾಖೆಗಳಿಂದ ಪಡೆಯಬೇಕಾದ ಅನುಮೋದನೆಗಳ ವಿವರಗಳನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ಒಳಗೊಂಡಿರಬೇಕು. ಜೊತೆಗೆ, ಹೊಸ ವಿಮಾನ ನಿಲ್ದಾಣದಿಂದ ಕೈಗಾರಿಕೆ, ಪ್ರವಾಸೋದ್ಯಮ ಮತ್ತು ಜನರ ಸಂಚಾರದ ಮೇಲಾಗುವ ಧನಾತ್ಮಕ ಪರಿಣಾಮಗಳನ್ನೂ ವಿವರಿಸಬೇಕಾಗುತ್ತದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಪ್ರಯಾಣಿಕರ ದಟ್ಟಣೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎಂ.ಬಿ. ಪಾಟೀಲ ಅವರು ಅಂಕಿಅಂಶಗಳ ಸಮೇತ ವಿವರಿಸಿದ್ದಾರೆ. 2033ರ ಹೊತ್ತಿಗೆ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆ ಅನಿವಾರ್ಯವಾಗಲಿದೆ ಎಂಬ ದೂರದೃಷ್ಟಿಯಿಂದ ಸರ್ಕಾರ ಈಗಿನಿಂದಲೇ ಕಾರ್ಯಪ್ರವೃತ್ತವಾಗಿದೆ. ದೆಹಲಿ ಮತ್ತು ಮುಂಬೈ ನಗರಗಳು ಈಗಾಗಲೇ ಎರಡೆರಡು ವಿಮಾನ ನಿಲ್ದಾಣಗಳನ್ನು ಹೊಂದಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಸಲಹಾ ಸಂಸ್ಥೆಯು ನೀಡುವ ಸರಕು ಸಾಗಣೆ ಮತ್ತು ಪ್ರಯಾಣಿಕರ ಸೇವೆಯ ಆರ್ಥಿಕ ಕಾರ್ಯಸಾಧ್ಯತಾ ವರದಿ ಬಂದ ನಂತರ, ಮೂರು ಸ್ಥಳಗಳಲ್ಲಿ ಯಾವುದು ಹೆಚ್ಚು ಸೂಕ್ತ ಎಂಬುದನ್ನು ನಿರ್ಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Read More
Next Story