ಬೀದರ್‌ ಗುತ್ತಿಗೆದಾರ ಆತ್ಮಹತ್ಯೆ | ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
x
ಬೆಂಗಳೂರಿನ ಪ್ರಿಯಾಂಕ್‌ ಖರ್ಗೆ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಬೀದರ್‌ ಗುತ್ತಿಗೆದಾರ ಆತ್ಮಹತ್ಯೆ | ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಪ್ರಿಯಾಂಕ್‌ ಖರ್ಗೆ ಅವರ ಬೆಂಗಳೂರು ನಿವಾಸದ ಎದುರು ಪ್ರತಿಭಟನೆ ನಡೆಸಿದರು.


ಬೀದ‌ರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಪ್ರಿಯಾಂಕ್‌ ಖರ್ಗೆ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಪ್ರಿಯಾಂಕ್‌ ಖರ್ಗೆ ನಿವಾಸದ ಎದುರು ಜಮಾಯಿಸಿ, ಪೋಸ್ಟರ್‌ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿ.ಟಿ. ರವಿ, 'ಪ್ರಾಮಾಣಿಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ 'ಸೂಸೈಡ್ ಭಾಗ್ಯ', ರಾಜಕೀಯ ಎದುರಾಳಿಗಳಿಗೆ 'ಸುಪಾರಿ ಭಾಗ್ಯದ' ಗ್ಯಾರೆಂಟಿ ನೀಡಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಗುತ್ತಿಗೆದಾರ ಸಾವಿಗೆ ಕಾರಣರಾದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು. ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ಯಾರೂ ಕೇಳುವುದಿಲ್ಲ ಎಂದುಕೊಂಡಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರ ಸಚಿನ್‌ ಬರೆದಿಟ್ಟಿರುವ ಡೆತ್‌ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರಿದೆ. ಇದಕ್ಕೆ ಸಚಿವರೇ ಜವಾಬ್ದಾರರು. ಪ್ರಕರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಕ್ಷದ ನಾಯಕರ ಕೊಲೆಗೆ ಸಂಚು ರೂಪಿಸಿರುವ ಆರೋಪವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯವ್ಯಾಪಿ ಹೋರಾಟ ಆರಂಭಿಸಲು ನಿರ್ಧರಿಸಿದೆ. ಪ್ರಕರಣವನ್ನು ಜ.3 ರೊಳಗೆ ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ಸಹ ನೀಡಿದೆ, ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.

ಪ್ರಿಯಾಂಕ್‌ ಖರ್ಗೆಗೆ ಹೈಕಮಾಂಡ್‌ ಬುಲಾವ್‌

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಕಾಂಗ್ರೆಸ್‌ ವರಿಷ್ಠರು ಪ್ರಿಯಾಂಕ್‌ ಖರ್ಗೆಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.

ದೆಹಲಿಗೆ ತೆರಳಲಿರುವ ಪ್ರಿಯಾಂಕ್‌ ಖರ್ಗೆ ಎರಡು ದಿನಗಳ ಕಾಲ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಗುತ್ತಿಗೆದಾರನ ಸಾವಿನ ಪ್ರಕರಣದಲ್ಲಿ ತಮ್ಮ ಪಾತ್ರ, ಬಿಜೆಪಿ ನಾಯಕರ ಆರೋಪ ಇತ್ಯಾದಿ ವಿಚಾರಗಳ ಕುರಿತು ವರಿಷ್ಠರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಲಾಗಿದೆ. ಪ್ರಿಯಾಂಕ್ ಖರ್ಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Read More
Next Story