
ಬೆಂಗಳೂರು ರಸ್ತೆ ಗುಂಡಿ: ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರವು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಾ, ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಳೆದಿದೆ. ಇದು ಖಂಡನೀಯ," ಎಂದು ತೀವ್ರ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿತು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ, ಜನರ ಪ್ರಾಣ ರಕ್ಷಿಸಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಆರ್. ಅಶೋಕ್, "ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ತುಂಬಿಹೋಗಿದ್ದು, ಸಾರ್ವಜನಿಕರು ಪ್ರಾಣವನ್ನು ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಈ ಮಾರಕ ಗುಂಡಿಗಳು ಪ್ರತಿನಿತ್ಯ ಅಪಘಾತಗಳಿಗೆ ಕಾರಣವಾಗುತ್ತಿವೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರವು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಾ, ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಳೆದಿದೆ. ಇದು ಖಂಡನೀಯ," ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಮುಖರ ದಂಡು
ಪ್ರತಿಭಟನೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಶಾಸಕರಾದ ಎಸ್. ಸುರೇಶ್ ಕುಮಾರ್, ಎನ್. ಮುನಿರತ್ನ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮುಖಂಡ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಸೇರಿದಂತೆ ಪಕ್ಷದ ಹಲವು ಸ್ಥಳೀಯ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ, ಸರ್ಕಾರದ ಗಮನ ಸೆಳೆಯುವ ಮೂಲಕ, ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇತ್ತೀಚೆಗೆ, ಬೆಂಗಳೂರಿನ ರಸ್ತೆ ಗುಂಡಿಗಳಿಂದಾಗಿ ತಮ್ಮ ಕಾರು ದುರಸ್ತಿಗೆ 23,000 ರೂಪಾಯಿ ಖರ್ಚಾಗಿದೆ ಎಂದು ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದು ನಗರದ ರಸ್ತೆಗಳ ದುಸ್ಥಿತಿಯ ಬಗ್ಗೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆಗಸ್ಟ್ ತಿಂಗಳಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ 5,000 ಗುಂಡಿಗಳ ಪೈಕಿ 2,400 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿಕೆ ನೀಡಿದ್ದರೂ, ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

