
ಕುಮಾರಸ್ವಾಮಿ, ವಿಜಯೇಂದ್ರ ಹಾಗೂ ಆರ್. ಅಶೋಕ್
Karnataka Budget 2025 | ಅಲ್ಪಸಂಖ್ಯಾತರ ತುಷ್ಟೀಕರಣದ ಬಜೆಟ್; ಪ್ರತಿಪಕ್ಷಗಳ ಟೀಕೆ
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 16 ನೇ ಬಜೆಟ್ ಅನ್ನು ಪ್ರತಿಪಕ್ಷಗಳು ಟೀಕಿಸಿದ್ದು, ಅಲ್ಪಸಂಖ್ಯಾತರನ್ನು ಓಲೈಸುವ ಜೆಟ್ ಎಂದು ಜರಿದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 16ನೇ ಬಜೆಟ್ ಅನ್ನು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಟೀಕಿಸಿವೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ "ಕೆಲವರ ತುಷ್ಟೀಕರಣ, ಬಹುತೇಕರ ತುಚ್ಛೀಕರಣ"ದಂತಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ 2025-26ನೇ ಸಾಲಿನ ಆಯವ್ಯಯದ ಹೂರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೂಡ ಬಜೆಟ್ ಕುರಿತು ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್, ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ಯಾವುದೇ ಜನಪರ ಯೋಜನೆ ಘೋಷಿಸದೇ, ಅನುದಾನ ಬಿಡುಗಡೆ ಮಾಡದೇ ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಲಾಗಿದೆ. ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ. ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
'ಹೇಳುವುದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಿಸಿದ್ದ ಬಹುತೇಕ ಯೋಜನೆಗಳು ಜಾರಿಯಾಗಲೇ ಇಲ್ಲ. ಈ ಬಜೆಟ್ ಕೂಡ ಅದೇ ರೀತಿ ಆಗುವ ಸಾಧ್ಯತೆಯೇ ಹೆಚ್ಚು ಎಂಬುದನ್ನು ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ. ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.
ಅಶೋಕ್ ಹೇಳಿದ್ಧೇನು?
ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿರಹಿತವಾದ ಅಡ್ಡಕಸುಬಿ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರು Outgoing CM ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿರುವುದರಿಂದ ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ. ಆದರೂ ತಮ್ಮ ಕಡೆಯ ಬಜೆಟ್ ನಲ್ಲಿ ಒಂದಿಷ್ಟಾದರೂ ಜನಪರ ಯೋಜನೆಗಳನ್ನು ಘೋಷಿಸುತ್ತಾರೆ ಎಂದು ಎದುರು ನೋಡುತ್ತಿದ್ದ ಜನರಿಗೆ ಈ ಬಜೆಟ್ ನಿರಾಸೆ ಮೂಡಿಸಿದೆ. ಇದು ಕೇವಲ 'ಬೊಗಳೆರಾಮಯ್ಯ ಬಜೆಟ್'. ಸಾಧನೆಯ ಬಲದಿಂದಾಗಲಿ, ದಿಟ್ಟ ನಾಯಕತ್ವದಿಂದಾಗಲಿ, ಅಹಿಂದ ನಾಮ ಜಪದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದರಿಂದ ಇಂತಹ ಬಜೆಟ್ ನೋಡಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗ್ಯಾರೆಂಟಿಗಳು ಬಡವರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಜನರನ್ನು ದಿಕ್ಕು ತಪ್ಪಿಸಿ, ಮತಗಳಿಸಿ ಅಧಿಕಾರಕ್ಕೆ ಏರುವುದು ಮಾತ್ರ ಆಗಿತ್ತು. ಅಧಿಕಾರಕ್ಕೆ ಬಂದ ಮೇಲೆ ಬಿಸಿ ತುಪ್ಪದಂತಾಗಿರುವ ಗ್ಯಾರೆಂಟಿಗಳನ್ನು ಮುಂದುವರೆಸಲು ಆಗದೆ, ನಿಲ್ಲಿಸಲೂ ಆಗದೆ ಕಾಂಗ್ರೆಸ್ ಸರ್ಕಾರ ಅಡಕತ್ತರಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕೆಡಿಪಿ ಅಂಕಿ-ಅಂಶದ ಪ್ರಕಾರ, ಕಳೆದ ವರ್ಷದ ಅಂದರೆ 2024-25 ನೇ ಬಜೆಟ್ ವರ್ಷದ 10 ತಿಂಗಳಲ್ಲಿ ಶೇ.62 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಕಳೆದ ವರ್ಷದ ಅನುದಾನವೇ ಖರ್ಚಾಗದೇ ಇರುವಾಗ ಇನ್ನೊಂದು ಬಜೆಟ್ ಮಂಡಿಸಿದರೆ ಪ್ರಯೋಜನವೇನು?, ಐದನೇ ಕ್ಲಾಸು ಪಾಸಾಗದ ವಿದ್ಯಾರ್ಥಿ ಆರನೇ ಕ್ಲಾಸಿನ ಪರೀಕ್ಷೆಗೆ ಕಟ್ಟಿದರೆ ಏನು ಪ್ರಯೋಜನ ಎಂಬಂತಾಗಿದೆ ಸಿದ್ದರಾಮಯ್ಯ ನವರ ಬಜೆಟ್ ಕಥೆ-ವ್ಯಥೆ ಎಂದು ಅಶೋಕ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕೇವಲ ನಾಮಕಾವಸ್ತೆ ಬಜೆಟ್. ಪಾಪರ್ ಸರ್ಕಾರದ ಪಾಪರ್ ಬಜೆಟ್. ನಿವೃತ್ತಿ ಆಗುತ್ತಿರುವ ಮುಖ್ಯಮಂತ್ರಿಗಳ ನಿರ್ಗಮನದ ಬಜೆಟ್. ಇದರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ನಯಾಪೈಸೆ ಉಪಯೋಗವಿಲ್ಲ ಎಂದು ಗೇಲಿ ಮಾಡಿದ್ದಾರೆ.
ಯಡಿಯೂರಪ್ಪ ಟೀಕೆ
ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
16ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ಬಿಟ್ಟರೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಏನೂ ಇಲ್ಲ. ರಾಜ್ಯದ ಅಭಿವೃದ್ಧಿಯು ವಿರುದ್ಧ ದಿಕ್ಕಿನಲ್ಲಿ ಸಾಗುವಂತಿದೆ. ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣ ನೀತಿಯು ಬಜೆಟ್‌ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ. ಬಜೆಟ್ ನಲ್ಲಿ ಧರ್ಮಾಧಾರಿತ ಮೀಸಲಾತಿ ನೀಡುವ ಮೂಲಕ ಸಂವಿಧಾನದ ಸದಾಶಯಗಳನ್ನು ಗಾಳಿಗೆ ತೂರಿರುವುದು, ಸಾಲದ ಹೊರೆ ಹೆಚ್ಚಿಸಿರುವುದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷಿಸಿರುವುದೇ ಬಜೆಟ್ ಸಾಧನೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿಲ್ಲ. ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ರೈತರಿಗಾಗಿ ಬಜೆಟ್ ನಲ್ಲಿ ಯಾವುದೇ ವಿಶೇಷ ಯೋಜನೆ ನೀಡಿಲ್ಲ. ರೈತರ ಆದಾಯ ಹೆಚ್ಚಳಕ್ಕೆ ಯಾವುದೇ ಕ್ರಮಗಳಿಲ್ಲ. ಸ್ಪಷ್ಟತೆಯಿಲ್ಲದ ಈ ಬಜೆಟ್ ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದೆ ಎಂದಿದ್ದಾರೆ.
ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳದ, ಕೇವಲ ಬೆಂಗಳೂರು, ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಇದಾಗಿದೆ ಎಂದು ಟೀಕಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಆದರೆ ಖರ್ಚು ಮಾಡಿಲ್ಲ. ಎಸ್ಪಿ, ಟಿಎಸ್ಪಿ ಹಣವನ್ನೂ ಖರ್ಚು ಮಾಡುವುದಿಲ್ಲ. ಕಳೆದ ವರ್ಷ ಆದಾಯ ಸಂಗ್ರಹದಲ್ಲಿ 10 ಸಾವಿರ ಕೋಟಿ ರೂ. ಕಡಿಮೆ ಸಂಗ್ರಹ ಮಾಡಿದ್ದಾರೆ. ಬಂಡವಾಳ ವೆಚ್ಚ ಕೂಡ ಕಡಿಮೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಯೋಜನೆ ಇಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಕಳೆದ ವರ್ಷವೂ 5 ಸಾವಿರ ಕೋಟಿ ಕೊಟ್ಟಿದ್ದರು. ಈ ವರ್ಷವೂ ಕೊಟ್ಟಿದ್ದಾರೆ. ಆದರೆ, ಹಣ ಖರ್ಚು ಮಾಡುವುದಿಲ್ಲ. ಕಿತ್ತೂರು ಕರ್ನಾಟಕ ಭಾಗಕ್ಕೆ ಶೂನ್ಯ ಕೊಡುಗೆ ನೀಡಿದ್ದು, ಇದು ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಆಗಿದೆ ಎಂದು ಅವರು ದೂರಿದ್ದಾರೆ.